ಬೆಳ್ತಂಗಡಿ, ಮಾ30(SS): ಬಿಜೆಪಿ ಭದ್ರ ಕೋಟೆ ಎಂದೇ ಹೆಸರು ವಾಸಿಯಾದ ದ.ಕ ಜಿಲ್ಲೆಯಲ್ಲಿ, ಬಿಜೆಪಿಗೆ ನಡುಕ ಆರಂಭವಾಗಿದೆ. ಬಿಜೆಪಿ ಯುವ ಮುಖಂಡ, ಪಕ್ಷದ ತಾಲೂಕು ಸಮಿತಿಯ ಅಧ್ಯಕ್ಷ ರಂಜನ್ ಜಿ. ಗೌಡ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗದ ಹಿನ್ನೆಲೆ, ಕಳೆದ ಕೆಲವು ವರ್ಷದಿಂದ ಮೌನವಾಗಿದ್ದ ರಂಜನ್ ಗೌಡ ಪಕ್ಷ ಬದಲಿಸಿ ಕಾಂಗ್ರೆಸ್ ಪಕ್ಷ ಸೇರಲು ನಿರ್ಧರಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಸಚಿವ ಯು.ಟಿ.ಖಾದರ್ ನೇತೃತ್ವದಲ್ಲಿ ಶುಕ್ರವಾರ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರನ್ನು ರಂಜನ್ ಭೇಟಿಯಾಗಿ ಈ ಬಗ್ಗೆ ಮಾತುಕತೆ ನಡೆಸಿದ್ದಾರೆ. ಮುಂಬರುವ ದಿನಗಳಲ್ಲಿ ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಸಮಾವೇಶ ನಡೆಯಲಿದ್ದು, ಈ ಸಂದರ್ಭ ರಂಜನ್ ಅಧಿಕೃತವಾಗಿ ಕಾಂಗ್ರೆಸ್ ಪಾಳಯ ಸೇರಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ.
ರಂಜನ್ ಗೌಡ 2013ರ ವಿಧಾನಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಂಡಿದ್ದರು. ಮಾತ್ರವಲ್ಲ ಕಳೆದ ವಿಧಾನಸಭಾ ಚುನಾವಣೆಯಲ್ಲಿಯೂ ಬಿಜೆಪಿ ಅವರಿಗೆ ಅವಕಾಶ ನೀಡಿರಲಿಲ್ಲ. ಹೀಗಾಗಿ ಪಕ್ಷದ ಮೇಲೆ ರಂಜನ್ ಗೌಡ ಮುನಿಸಿಕೊಂಡಿದ್ದರು. ಈ ಹಿಂದೆ ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.
ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಿನ್ನೆ ರಾತ್ರಿ ರಂಜನ್ ಗೌಡ ಬೆಂಗಳೂರಿನಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದು, ಅಧಿಕೃತವಾಗಿ ಪಕ್ಷ ಸೇರ್ಪಡೆ ಆಗಲಿದ್ದಾರೆ ಎಂದು ತಿಳಿದುಬಂದಿದೆ.
ಇದೀಗ ಕಾಂಗ್ರೆಸ್ ಪಕ್ಷಕ್ಕೆ ರಂಜನ್ ಗೌಡ ಮರಳಿ ಬಂದಿರುವುದು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿಸಿದೆ. ಮಾತ್ರವಲ್ಲ, ಬಿಜೆಪಿ ಪಾಳಯದಲ್ಲಿ ನಡುಕ ಹುಟ್ಟಿಸಿದೆ.