ಮಂಗಳೂರು, ಮೇ 26 (DaijiworldNews/HR): ಜಿಲ್ಲೆಯಲ್ಲಿ ನಡೆದಿರುವ ಎಲ್ಲ ಧರ್ಮಾಧಾರಿತ ರಾಜಕೀಯ ಹತ್ಯೆಗಳ ಬಗ್ಗೆ ವಿಶೇಷ ತನಿಖಾ ದಳ (ಎಸ್ಐಟಿ) ರಚಿಸಿ ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಕೆಪಿಸಿಸಿ ಉಪಾಧ್ಯಕ್ಷ ರಮಾನಾಥ ರೈ ಹೇಳಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಧರ್ಮಾಧಾರಿತ ರಾಜಕೀಯ ಹತ್ಯೆಗಳಲ್ಲಿ ಶರತ್ ಮಡಿವಾಳ, ಅಶ್ರಫ್, ಜಲೀಲ್, ಮಸೂದ್, ಪ್ರವೀಣ್ ನೆಟ್ಟಾರು ಇನ್ನೂ ಅನೇಕ ಅಮಾಯಕರು ಜೀವ ಕಳೆದುಕೊಂಡಿದ್ದು, ಹತ್ಯೆ ಪ್ರಕರಣಗಳಲ್ಲಿ ಭಾಗಿಯಾದವರಲ್ಲಿ ಬಿಜೆಪಿ ಮತ್ತು ಎಸ್ಡಿಪಿಐ ಪಕ್ಷಗಳ ಕಾರ್ಯಕರ್ತರು ಇರಬಹುದು ಎಂದರು.
ಇನ್ನು ಒಬ್ಬರೇ ಒಬ್ಬ ಕಾಂಗ್ರೆಸ್ ಕಾರ್ಯಕರ್ತ ತ್ಯೆ ಪ್ರಕರಣಗಳಲ್ಲಿ ಭಾಗಿಯಾಗಿಲ್ಲ ಎಂದು ನಾನು ಅನೇಕ ಬಾರಿ ಪುನರುಚ್ಚರಿಸಿದ್ದೇನೆ. ಇದನ್ನೂ ಕೂಡ ಗಂಭೀರವಾಗಿ ಪರಿಗಣಿಗಬೇಕಾಗಿದೆ ಎಂದಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಹತ್ಯೆ ಮಾಡಿಸಿದ್ದಾರೆ ಎಂದು ಹೇಳಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಕಾಂಗ್ರೆಸ್ ಜಿಲ್ಲಾ ಘಟಕ ಮುಂದಾಗಿದೆ. ಈ ಬಗ್ಗೆ ಕೂಡ ತನಿಖೆ ನಡೆಯಬೇಕು ಎಂದು ಹೇಳಿದ್ದಾರೆ.