ಪುತ್ತೂರು, ಜೂ 20 (DaijiworldNews/MS): ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ಮತ್ತು ಬಿಜೆಪಿ ರಾಜ್ಯಾಧ್ಯಕ ನಳಿನ್ ಕುಮಾರ್ ಕಟೀಲ್ ಅವರ ಭಾವಚಿತ್ರವನ್ನೊಳಗೊಂಡ ಬ್ಯಾನರ್ ಅಳವಡಿಕೆ ಪ್ರಕರಣದಲ್ಲಿ ಬಂಧಿತ ಯುವಕರ ಮೇಲೆ ಪೊಲೀಸ್ ದೌರ್ಜನ್ಯ ನಡೆಸಿರುವ ಆರೋಪ ಎದುರಿಸುತ್ತಿದ್ದ ಡಿವೈಎಸ್ಪಿ ಡಾ| ವೀರಯ್ಯ ಹಿರೇಮಠ ಅವರಿಗೆ ನ್ಯಾಯಾಲಯ ಜಾಮೀನು ನೀಡಿದೆ.
ಹಿರೇಮಠ ನ್ಯಾಯಾಲಯಕ್ಕೆ ಶರಣಾಗಿ ಜಾಮೀನು ಪಡೆದುಕೊಂಡಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಗ್ರಾಮಾಂತರ ಠಾಣೆಯ ಆಗಿನ ಎಸ್ಐ ಶ್ರೀನಾಥ್ ರೆಡ್ಡಿ ಹಾಗೂ ಕಾನ್ಸ್ಟೆಬಲ್ ಹರ್ಷಿತ್ನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಡಿವೈಎಸ್ಪಿ ವೀರಯ್ಯ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗಿತ್ತು.
ವಿಧಾನಸಭಾ ಚುನಾವಣೆಯ ಫಲಿತಾಂಶದ ಬಳಿಕ ನಗರದ ಬಸ್ ನಿಲ್ದಾಣದ ಬಳಿ, ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಭಾವಚಿತ್ರವನ್ನೊಳಗೊಂಡ ಬ್ಯಾನರ್ಗೆ ಶ್ರದ್ಧಾಂಜಲಿ ಬರಹದೊಂದಿಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕರನ್ನು ಪೊಲೀಸರು ಬಂಧಿಸಿ ಡಿವೈಎಸ್ಪಿ ಕಚೇರಿಗೆ ಕರೆದೊಯ್ದು ದೌರ್ಜನ್ಯ ನಡೆಸಿದ್ದರು ಎಂದು ಆರೋಪಿಸಲಾಗಿತ್ತು.
ಡಿವೈಎಸ್ಬಿ ಡಾ|ವೀರಯ್ಯ ಹಿರೇಮಠ ಅವರ ನೇತೃತ್ವದಲ್ಲಿಯೇ ಪೊಲೀಸರು ಹಲ್ಲೆ ಮಾಡಿದ್ದರು ಎ೦ದು, ಆಸ್ಪತ್ರೆಯಲ್ಲಿ ದಾಖಲಾಗಿದ್ದ ಗಾಯಾಳು ಯುವಕರು ಆರೋಪಿಸಿದ್ದರು. ಪೊಲೀಸ್ ದೌರ್ಜನ್ಯ ಪ್ರಕರಣದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತಲ್ಲದೆ ಸಾರ್ವಜನಿಕವಾಗಿಯೂ ಆಕ್ರೋಶ ವ್ಯಕ್ತವಾಗಿ ತಪ್ಪಿತಸ್ಥ ಪೊಲೀಸರ ಮೇಲೆ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು ಎನ್ನುವ ಆಗ್ರಹ ವ್ಯಕ್ತವಾಗಿತ್ತು.
ಹಲ್ಲೆಗೊಳಗಾಗಿದ್ದ ಯುವಕ ಅವಿನಾಶ್ ಅವರ ತಂದೆ ವೇಣುನಾಥ ನರಿಮೊಗರು ನೀಡಿರುವ ದೂರಿನ ಮೇರೆಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಡಿವೈಎಸ್ನಿ ಡಾ|ವೀರಯ್ಯ ಹಿರೇಮಠ ಅವರು ಜೂ.16ರಂದು ಪುತ್ತೂರು ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ನ್ಯಾಯಾಲಯ ಅವರಿಗೆ ಜಾಮೀನು ನೀಡಿದೆ.