ಬಂಟ್ವಾಳ, ಏ 01(SM): ಕಲ್ಲಡ್ಕ ಪ್ರಭಾಕರ್ ಭಟ್ ಹೆಸರನ್ನು ಬಳಕೆ ಮಾಡಿ ಅಪಪ್ರಚಾರ ಮಾಡಲಾಗುತ್ತಿರುವ ಹಿನ್ನೆಲೆ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬಂಟ್ವಾಳ ನಗರ ಠಾಣಾ ಪೊಲೀಸರಿಗೆ ಕಲ್ಲಡ್ಕ ಪ್ರಭಾಕರ ಭಟ್ ದೂರು ನೀಡಿದ್ದಾರೆ.
ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಯಾದ ಬಳಿಕ ದ.ಕ. ಜಿಲ್ಲೆಯ ರಾಜಕೀಯ ತವರೂರಾಗಿರುವ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಚಾಲೇಂಜಿಗ್ ವಾರ್ ಶುರುವಾಗಿದೆ.
‘ಹಿಂದುತ್ವದ ವಿಷಯ ಬಂದರೆ ನಳಿನ್ ಗಿಂತ ಮಿಥುನ್ ರೈ ಯೋಗ್ಯ:ಕಲ್ಲಡ್ಕ ಡಾ. ಪ್ರಭಾಕರ್ ಭಟ್’ ಎಂಬ ಬರಹಗಳು ಫೇಸ್ ಬುಕ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡತೊಡಗಿವೆ. ಕಲ್ಲಡ್ಕ ಪ್ರಭಾಕರ್ ಭಟ್ ಹೆಸರು ಬಳಸಿರುವ ಕಾರಣ ಈ ವಿಚಾರ ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಕಿಡಿಗೇಡಿಗಳು ಈ ರೀತಿಯ ಕೃತ್ಯಗಳನ್ನು ನಡೆಸುತ್ತಿದ್ದು, ಕಾನೂನು ಬಾಹಿರ ಸಂದೇಶವನ್ನು ರವಾನಿಸುವ ವ್ಯಕ್ತಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಡಾ. ಭಟ್ ಒತ್ತಾಯಿಸಿದ್ದಾರೆ.
ಇನ್ನು ಲೋಕಸಭೆ ಚುನಾವಣೆ ಘೋಷಣೆಯಾದ ಬಳಿಕ ದ.ಕ. ಜಿಲ್ಲಾ ಬಿಜೆಪಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಸಾಕಷ್ಟು ಚರ್ಚೆಗಳು ನಡೆದಿದ್ದವು. ಈ ಸಂದರ್ಭದಲ್ಲಿ ಹಾಲಿ ಸಂಸದ ನಳಿನ್ ಅವರಿಗೆ ಟಿಕೆಟ್ ನೀಡಬಾರದೆಂಬ ಮಾತುಗಳು ಕೇಳಿಬಂದಿದ್ದವು. ಅಲ್ಲದೆ, ಕಲ್ಲಡ್ಕ ಪ್ರಭಾಕರ್ ಭಟ್ ಅವರೂ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದರು ಎಂದು ದೂರಲಾಗಿತ್ತು. ಇದೇ ಕಾರಣಕ್ಕಾಗಿ ಕಿಡಿಗೇಡಿಗಳು ಪ್ರಭಾಕರ ಭಟ್ ಮಿಥುನ್ ಪರ ಬ್ಯಾಟಿಂಗ್ ಮಾಡಿದ್ದಾರೆ ಎನ್ನುವ ಹಾಗೆ ಬರಹಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸುತ್ತಿದ್ದಾರೆ ಎನ್ನಲಾಗಿದೆ.