ಪುತ್ತೂರು, ಜು 07 (DaijiworldNews/HR): ಹಿಂದೂ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲರವರು ಪುತ್ತಿಲ ಪರಿವಾರದ ಮೂಲಕ ಹೊಸ ಹೆಜ್ಜೆ ಹಾಕುತ್ತಿರುವ ಸಂದರ್ಭದಲ್ಲೇ ಬಿ ದೆಹಲಿಯಲ್ಲಿ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ಇದೀಗ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.
ಅರುಣ್ ಕುಮಾರ್ ಪುತ್ತಿಲ ಅವರು 2024ರ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ತಯಾರಿ ನಡೆಸುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಪುತ್ತಿಲ ಅವರ ಈ ನಡೆ ಬಿಜೆಪಿಗೆ ಮುಂದಿನ ಲೋಕಸಭೆ ಚುನಾವಣೆಯಲ್ಲೂ ತೊಂದರೆ ಆಗಬಹುದೆಂದು ಸಂಘಪರಿವಾರದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ.
ಇನ್ನು ಈ ಎಲ್ಲಾ ಬೆಳವಣಿಗೆಗಳ ನಡುವೆ ಅರುಣ್ ಕುಮಾರ್ ಪುತ್ತಿಲ ಅವರು ಬಿಜೆಪಿ ಪ್ರಮುಖರ ಕರೆಯಂತೆ ದೆಹಲಿಗೆ ತೆರಳಿ ಬಿಜೆಪಿ ಮುಖಂಡರೊಂದಿಗೆ ಮಾತುಕತೆ ನಡೆಸಿದ್ದಾರೆಂದು ತಿಳಿದು ಬಂದಿದೆ.
ಪುತ್ತೂರು ವಿಧಾನ ಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಥಿಸಿದ್ದ ಅರುಣ್ ಕುಮಾರ್ ಪುತ್ತಿಲ ಅವರು 62 ಸಾವಿರ ಮತ ಪಡೆದಿದ್ದು, ಬಿಜೆಪಿ ಅಭ್ಯರ್ಥಿ 37 ಸಾವಿರ ಮತ ಪಡೆದಿದ್ದರು.