ಮಂಗಳೂರು, ಜು 23 (DaijiworldNews/MS): ನಗರದಲ್ಲಿ ಪೊಲೀಸರ ಕಾರ್ಯಾಚರಣೆ ಮುಂದುವರಿದಿದ್ದು ಮಾದಕ ವಸ್ತು ಎಂಡಿಎಂಎ ಮಾರುತ್ತಿದ್ದ ಇಬ್ಬರನ್ನು ಮಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಕೌಶಿಕ್ ದೇವಾಡಿಗ (26), ಮಹಮ್ಮದ್ ಇರ್ಷಾದ್ (29) ಬಂಧಿತರು. ಮೂಡಬಿದಿರೆ ತಾಲೂಕು ಮುಲ್ಕಿ ಕಿನ್ನಿಗೋಳಿ ತಾಳಿಪ್ಪಾಡಿ ಗ್ರಾಮದ ಗುತ್ತಕಾಡು ಬಸ್ ಸ್ಟಾಂಡ್ ಬಳಿ ಈ ಇಬ್ಬರು ಯುವಕರು ಅಕ್ರಮವಾಗಿ ಮಾದಕ ವಸ್ತುವಾದ ಎಂಡಿಎಂಎ ವಶದಲ್ಲಿರಿಸಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು.
ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಇಬ್ಬರನ್ನು ಬಂಧಿಸಿ, ಅವರಿಂದ 9 ಗ್ರಾಂ ತೂಕದ 45,000 ರೂಪಾಯಿ ಮೌಲ್ಯದ ಎಂಡಿಎಂಎ ವಶಕ್ಕೆ ಪಡೆದಿದ್ದಾರೆ.
ಈ ಹಿಂದೆಯೂ ಮೊಬೈಲ್ ಸುಲಿಗೆ, ಕೊಲೆ ಯತ್ನದಂತಹ ಕೆಲ ಅಪರಾಧ ಪ್ರಕರಣಗಳಲ್ಲಿ ಆರೋಪಿಗಳು ಭಾಗಿಯಾಗಿದ್ದರು. ಇದೀಗ ಮಾದಕ ವಸ್ತು ಸಾಗಣೆ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದಾರೆ.
ಈ ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಯವರಾದ ರಾಜೇಂದ್ರ ಬಿ, ಸುದೀಪ್ ಎಂ ವಿ, ಶರಣಪ್ಪ ಭಂಡಾರಿ, ನರೇಂದ್ರ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.