ಬಂಟ್ವಾಳ, ಜು 23 (DaijiworldNews/AK):ಕರಾವಳಿ ಭಾಗದಲ್ಲಿ ಎಡೆಬಿಡದೆ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನಲೆ ನೇತ್ರಾವತಿ ನದಿಯ ನೀರಿನ ಮಟ್ಟ ಏರಿಕೆಯಾಗಿದೆ.
ನೇತ್ರಾವತಿ ನೀರಿನ ಮಟ್ಟ 7 ಮೀ. ಎತ್ತರದಲ್ಲಿ ಹರಿಯುತ್ತಿದೆ, ನೀರಿನ ಅಪಾಯಕಾರಿ ಮಟ್ಟ 8.5 ಮೀ. ಆಗಿದೆ. ಹೀಗಾಗಿ ಯಾವುದೇ ಸಂದರ್ಭದಲ್ಲಿ ಪ್ರವಾಹದ ಭೀತಿ ಎದುರಾಗಬಹುದು ಎಂಬ ಆತಂಕ ಸ್ಥಳೀಯರಲ್ಲಿ ಮನೆಮಾಡಿದೆ.
ಪ್ರವಾಹದ ಭೀತಿಯ ಹಿನ್ನೆಲೆಯಲ್ಲಿ ಅಲ್ಲಿಯ ಸಂತ್ರಸ್ತರಿಗೆ ಎಲ್ಲಾ ರೀತಿಯ ಸೂಕ್ತ ವ್ಯವಸ್ಥೆಗಳನ್ನು ಕೈಗೊಂಡಿದ್ದು, ಅಧಿಕಾರಿಗಳು ಕೂಡ ಯಾವುದೇ ಕಾರಣಕ್ಕೂ ಕೇಂದ್ರ ಸ್ಥಾನ ಬಿಟ್ಟು ಹೋಗದಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಸೂಚನೆ ನೀಡಿದ್ದಾರೆ.
ಇತ್ತ ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ. ಘಟ್ಟ ಪ್ರದೇಶದಿಂದ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಕುಮಾರಧಾರಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದ್ದು ನದಿ ಬದಿಗೆ ಹೋಗದಂತೆ ದೇವಾಲಯದ ಭಕ್ತರಿಗೆ ಸೂಚನೆ ನೀಡಲಾಗಿದೆ.