ಮಂಗಳೂರು, ಜು 23 (DaijiworldNews/SM): ಯುವಕನೋರ್ವನನ್ನು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಗರ ಕುಲಶೇಖರದ ನಿಡ್ಡೆಲ್ನ ಹರ್ಷಿತ್ ಶೆಟ್ಟಿ (29) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತನಿಂದ 25 ಗ್ರಾಂ ತೂಕದ ರೂ. 1,25,000 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು ವಶಕ್ಕೆ ಪಡೆದುಕೊಳ್ಳಲಾಗಿದೆ. ಅಲ್ಲದೆ, 1 ಮೊಬೈಲ್ ಫೋನ್, 1 ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 1,35,500 ರೂ. ಆಗಬಹುದು ಎಂದು ಅಂದಾಜಿಸಲಾಗಿದೆ.
ಬೆಂಗಳೂರಿನಿಂದ ಮಂಗಳೂರಿಗೆ ಮಾದಕ ವಸ್ತು ಎಂಡಿಎಂಎಯನ್ನು ಖರೀದಿಸಿಕೊಂಡು ನಗರದ ಪಡೀಲ್ ಪರಿಸರದಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿಎ ಹೆಗಡೆ ನೇತೃತ್ವದ ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಮಾದಕ ವಸ್ತು ಮಾರಾಟ ಜಾಲದಲ್ಲಿ ಇನ್ನೂ ಹಲವಾರು ಆರೋಪಿಗಳು ಭಾಗಿಯಾಗಿದ್ದು ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.