ಮಂಗಳೂರು, ಜು 27 (DaijiworldNews/HR): ಮಂಗಳೂರು ನಗರದಾದ್ಯಂತ ಮಾದಕ ವಸ್ತುವಾದ ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ಕುಖ್ಯಾತ ಡ್ರಗ್ ಪೆಡ್ಲರ್ ಗಳ ತಂಡದ ಇನ್ನೋರ್ವ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ಧಾರೆ.
ಅಬ್ದುಲ್ ಉವೇಸ್ ಬಂಧಿತ ಆರೋಪಿ.
ಜು.20 ರಂದು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಗ್ರಾಮದ ಪಿಲಿಕೂರಿನಲ್ಲಿ ಎಂಡಿಎಂಎ ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಮೂವರನ್ನು ಬಂಧಿಸಲಾಗಿತ್ತು.
ಬುಧವಾರ ಪ್ರಕರಣದಲ್ಲಿ ಭಾಗಿಯಾದ ಇತರ ಆರೋಪಿಗಳ ಪತ್ತೆ ಕಾರ್ಯದಲ್ಲಿದ್ದ ಸಿಸಿಬಿ ಪೊಲೀಸರು ಸಮಯ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಎಂಡಿಎಂಎ ಸಹಿತ ಅಬ್ದುಲ್ ಉವೇಸ್ ಎಂಬಾತನನ್ನು ಬಂಧಿಸಿದ್ದಾರೆ.
ಆರೋಪಿ ಅಬ್ದುಲ್ ಉವೇಸ್ ಎಂಬಾತನ ವಿರುದ್ಧ ಈ ಹಿಂದೆ ಮೂಡಬಿದ್ರಿ ಪೊಲೀಸ್ ಠಾಣೆಯಲ್ಲಿ ಹಲ್ಲೆ, ಕಿಡ್ನಾಫ್ ಪ್ರಕರಣ, ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟ/ ಸೇವನೆ ಪ್ರಕರಣ, ಉಡುಪಿ ಜಿಲ್ಲೆ ಸೆನ್ ಪೊಲೀಸ್ ಠಾಣೆಯಲ್ಲಿ ಐ ಟಿ ಅಕ್ಟ್ ಪ್ರಕರಣ ದಾಖಲಾಗಿದೆ. ಈ ಪ್ರಕರಣಗಳ ಪೈಕಿ 2 ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದು, ಈತನ ವಿರುದ್ಧ 3 ವಾರಂಟ್ ಜ್ಯಾರಿಯಲ್ಲಿದೆ.