ಮಂಗಳೂರು, ಜು 28 (DaijiworldNews/SM): ಮಾದಕ ವಸ್ತು ಎಂಡಿಎಂಎ ಕಾರಿನಲ್ಲಿ ಸಾಗಾಟ ನಡೆಸುತ್ತಿದ್ದ ವೇಳೆ ಆರೋಪಿಯೋರ್ವ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ನಗರ ಸಿಸಿಬಿ ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.
ಉಳ್ಳಾಲದ ಬೋಳಿಯಾರ್ ನಿವಾಸಿ ಮಹಮ್ಮದ್ ಆರೀಫ್ @ ಆರೀಫ್(28) ಬಂಧಿತ ಅರೋಪಿಯಾಗಿದ್ದಾನೆ. ಈತನಿಂದ 25 ಗ್ರಾಂ ತೂಕದ ರೂ. 1,25,000/- ಮೌಲ್ಯದ ಮಾದಕ ವಸ್ತುವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಅಲ್ಲದೆ, ಆತ ಬಳಸಿಕೊಂಡಿದ್ದ ಕಾರು, ಮೊಬೈಲ್ ಫೋನ್, ಡಿಜಿಟಲ್ ತೂಕದ ಮಾಪಕವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 6,35,500/- ಎಂದು ಅಂದಾಜಿಸಲಾಗಿದೆ.
ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯ ವಿರುದ್ಧ ಈ ಹಿಂದೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಜಾನುವಾರು ಕಳ್ಳತನ ಪ್ರಕರಣ ದಾಖಲಾಗಿರುತ್ತದೆ. ಈ ಆರೋಪಿಯ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಯವರಾದ ರಾಜೇಂದ್ರ ಬಿ, ಸುದೀಪ್ ಎಂ ವಿ, ಶರಣಪ್ಪ ಭಂಡಾರಿ, ನರೇಂದ್ರ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.