ಬಂಟ್ವಾಳ, ಆ 01 (DaijiworldNews/SM): ಕಳೆದ 7 ವರ್ಷಗಳ ಹಿಂದೆ ಕಲ್ಕಡ್ಕದಲ್ಲಿ ನಡೆದ ಸಮಾರಂಭವೊಂದರಲ್ಲಿ ಪೊಲೀಸ್ ಇಲಾಖೆಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರರು ನ್ಯಾಯಾಲಯಕ್ಕೆ ಸಾಕ್ಷಾಧಾರಗಳನ್ನು ಒದಗಿಸುವಲ್ಲಿ ವಿಫಲರಾದ ಹಿನ್ನೆಲೆಯಲ್ಲಿ ಪ್ರಕರಣದ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿ ಒಂದನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಅದೇಶ ನೀಡಿದೆ.
8 ಮಾರ್ಚ್ 2014 ರಲ್ಲಿ ಕಲ್ಲಡ್ಕದಲ್ಲಿ ನಡೆದ ಕಾಂಗ್ರೇಸ್ ಸಾಮರಸ್ಯ ಕಾರ್ಯಕ್ರಮದ ಭಾಷಣದ ವೇಳೆ ಪೋಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆಯ ಜೊತೆಗೆ , ಕೊಲೆಯತ್ನ ಮಾಡಿದ್ದರು, ಸಾರ್ವಜನಿಕ ಸೊತ್ತುಗಳಿಗೆ ಬೆಂಕಿ ಹಚ್ಚಿ , ಜನರಿಗೆ ತೊಂದರೆಪಡಿಸಿದ್ದರು ಎಂದು ಆರೋಪಿಸಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲ್ಲಡ್ಕದ ಕೃಷ್ಣಪ್ಪ ಆಚಾರ್ಯ ಹಾಗೂ ಇತರ 28 ಮಂದಿಯ ವಿರುದ್ದ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪೋಲೀಸರು ಸುಮೋಟ್ ಪ್ರಕರಣ ದಾಖಲಿಸಿಕೊಂಡು, ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಪ್ರಕರಣವನ್ನು ವಿಚಾರಣೆ ನಡೆಸಿದ ನ್ಯಾಯಾಲಯವು, ಸಾಕ್ಷ್ಯಾಧಾರಗಳ ಕೊರತೆಯ ಹಿನ್ನೆಲೆಯಲ್ಲಿ ಅರೋಪಿಗಳನ್ನು ಖುಲಾಸೆಗೊಳಿಸಿದೆ.
ಆರೋಪಿಗಳ ಪರವಾಗಿ ಹಿರಿಯ ನ್ಯಾಯವಾದಿ ಕೆ.ಶಂಭು ಶರ್ಮ ವಾದಿಸಿದ್ದರು.