ಮಂಗಳೂರು, ಆ 06 (DaijiworldNews/MS): ಮುಂಗಾರು ಕ್ಷೀಣಿಸಿದ ಕಾರಣ ಕರಾವಳಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಸೆಕೆ ಅನುಭವ ಹೆಚ್ಚುತ್ತಿದೆ. ಮುಂದಿನ ದಿನಗಳಲ್ಲಿ ಉಷ್ಟಾಂಶ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ತಿಳಿಸಿದೆ.
ಹವಾಮಾನ ಇಲಾಖೆ ಅಧಿಕಾರಿಗಳ ಪ್ರಕಾರ, ಸದ್ಯ ಮುಂಗಾರು ದುರ್ಬಲಗೊಂಡಿದ್ದು, ಸದ್ಯಕ್ಕೆ ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇಲ್ಲ. ಹೀಗಾಗಿ ಈ ಋತುವಿನಲ್ಲಿ ಗರಿಷ್ಠ ತಾಪಮಾನವು ವಾಡಿಕೆಗಿಂತ ಎರಡರಿಂದ ಮೂರು ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಬಹುದು ಎಂದು ಹೇಳಿದ್ದಾರೆ. ಮಂಗಳೂರಿನಲ್ಲಿ ಶನಿವಾರದಂದು ಗರಿಷ್ಠ ತಾಪಮಾನ 29.8 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 23.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಕಳೆದ ವರ್ಷ ಕರಾವಳಿ ಭಾಗದಲ್ಲಿ ಮುಂಗಾರು ಮಳೆ ಉತ್ತಮವಾಗಿ ಸುರಿದಿತ್ತು. ಆಗಸ್ಟ್ 8, 2022 ರವರೆಗೆ, ಕರಾವಳಿ ಪ್ರದೇಶದಲ್ಲಿ ಸುಮಾರು ಮೂರು ಪ್ರತಿಶತದಷ್ಟು ಹೆಚ್ಚು ಮಳೆ ಸುರಿದಿತ್ತು. ಆದರೆ, ಈ ವರ್ಷ ಮುಂಗಾರು ಮಳೆ ಬರುವುದು ತಡವಾಗಿದೆ. ಕೆಲ ದಿನಗಳಿಂದ ಸುರಿದ ಭಾರಿ ಮಳೆ ಬಿಟ್ಟರೆ ಈಗ ಮುಂಗಾರು ಕ್ಷೀಣಿಸಿದೆ. ಆಗಸ್ಟ್ 5, 2023 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ. 19 ರಷ್ಟು ಮತ್ತು ಉಡುಪಿ ಜಿಲ್ಲೆಯಲ್ಲಿ ಶೇ. 13 ರಷ್ಟು ಮಳೆಯ ಕೊರತೆಯಿದೆ.