ಮಂಗಳೂರು, ಆ 08 (DaijiworldNews/SM): ಎಂಡಿಎಂಎ ಮಾದಕ ವಸ್ತು ಹೊಂದಿದ್ದಾತನನ್ನು ನಗರದ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ತಾಲೂಕಿನ ತಲಪಾಡಿಯ ಕೆ ಸಿ ರೋಡ್ ಪರಿಸರದಲ್ಲಿ ಮಾದಕ ವಸ್ತು ಮಾರಾಟಕ್ಕೆ ಆರೋಪಿ ಯತ್ನ ಮಾಡಿದ್ದ. ಈ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಕಾಸರಗೋಡು ಉಪ್ಪಳದ ಮೊಹಮ್ಮದ್ ರಫೀಕ್(40) ಬಂಧಿತ ಆರೋಪಿಯಾಗಿದ್ದಾನೆ. ಆರೋಪಿಯಿಂದ 50 ಗ್ರಾಂ ತೂಕದ 2,50,000/- ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, ನಗದು, ಮೊಬೈಲ್, ಡಿಜಿಟಲ್ ತೂಕ ಮಾಪನ ಪೊಲೀಸ್ ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಯ ವಿರುದ್ಧ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಬೆಂಗಳೂರಿನಿಂದ ಖರೀದಿಸಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸಿದ್ದ ಎಂದು ತಿಳಿದುಬಂದಿದೆ.
ಈ ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ ರಾಜೇಂದ್ರ ಬಿ, ಸುದೀಪ್ ಎಂ ವಿ, ಶರಣಪ್ಪ ಭಂಡಾರಿ, ನರೇಂದ್ರ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.
“ಡ್ರಗ್ಸ್ ಫ್ರಿ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ನಗರದಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುವ ವ್ಯಕ್ತಿಗಳನ್ನು ಪತ್ತೆ ಹಚ್ಚುವ ಸಲುವಾಗಿ ಮಾದಕ ವಸ್ತು ಮಾರಾಟ ಮಾಡುವವರ ಮಾಹಿತಿಯನ್ನು ಪೊಲೀಸ್ ಇಲಾಖೆಗೆ ಒದಗಿಸುವಂತೆ ಸಾರ್ವಜನಿಕರಲ್ಲಿ ಕೋರಲಾಗಿದೆ.