ಉಡುಪಿ, ಆ 14 (DaijiworldNews/HR): ಸಮೃದ್ಧಿ ಸಂಜೀವಿನಿ ಸ್ವಸಹಾಯ ಗುಂಪಿನ ಸದಸ್ಯರು ಆರಂಭಿಸಿರುವ 'ಸಂಜೀವಿನಿ ಸೂಪರ್ ಮಾರ್ಕೆಟ್' ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಮೆಚ್ಚುಗೆ ವ್ಯಕ್ತಪಡಿಸಿದರು.
ಉಡುಪಿಯ ತಾಲೂಕು ಪಂಚಾಯತ್ ಆವರಣದಲ್ಲಿ ಆರಂಭಿಸಿರುವ ಸೂಪರ್ ಮಾರ್ಕೆಟ್ ಹಾಗೂ ಸಂಜೀವಿನಿ ಆಹಾರೋತ್ಸವಕ್ಕೆ ಸೋಮವಾರ ಚಾಲನೆ ನೀಡಿದ ಬಳಿಕ ಮಾತನಾಡಿದ ಸಚಿವರು, ಪುರುಷರಿಗೆ ಹೋಲಿಸಿದರೆ ಮಹಿಳೆಯರು ಶಾರೀರಿಕವಾಗಿ ಅಶಕ್ತರಿರಬಹುದು, ಆದರೆ ಮಾನಸಿಕವಾಗಿ ಪುರುಷರಿಗಿಂತ ಹೆಚ್ಚು ಶಕ್ತವಾಗಿದ್ದಾಳೆ. ಫ್ಯಾಬ್ ಇಂಡಿಯಾ, ಗುಡ್ ಅರ್ಥ್ ನಂತ ಮಾರುಕಟ್ಟೆಗಳಿಗಿಂತಲೂ ಸಂಜೀವಿನಿ ಸೂಪರ್ ಮಾರ್ಕೆಟ್ ಅದ್ಭುತವಾಗಿದೆ ಎಂದರು.
ಮಹಿಳೆಯರು ಸ್ವಾವಲಂಬನೆ ಜೀವನ ನಡೆಸುವ ದೃಷ್ಟಿಯಿಂದ ಕರ್ನಾಟಕ ಸರ್ಕಾರ ಗೃಹ ಲಕ್ಷ್ಮಿ, ಶಕ್ತಿ ಯೋಜನೆ, ಗೃಹ ಜ್ಯೋತಿಯಂತಹ ಕಾರ್ಯಗಳನ್ನು ಜಾರಿಗೆ ತಂದಿದೆ. ಮಹಿಳೆಯರ ಮುಖದಲ್ಲಿ ಮಂದಹಾಸ ತರುವುದೇ ಸರ್ಕಾರದ ಉದ್ದೇಶ. ಎಲ್ಲಾ ಮಹಿಳೆಯರು ಸ್ವಾಭಿಮಾನಿ ಜೀವನ ಕಟ್ಟಿಕೊಳ್ಳುವುದು. ಅಚಾರ, ವಿಚಾರಗಳನ್ನು ಎಲ್ಲರೂ ಅಳವಡಿಸಿಕೊಂಡು ಸಾಗಬೇಕು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.
ಸಂಜೀವಿನಿ ಸೂಪರ್ ಮಾರ್ಕೆಟ್ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸುವಂತಾಗಲಿ ಎಂದು ಸಚಿವರು ಹಾರೈಸಿದರು.
ಈ ವೇಳೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಕಾಪು ಕ್ಷೇತ್ರದ ಶಾಸಕ ಸುರೇಶ್ ಶೆಟ್ಟಿ, ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ, ಜಿಲ್ಲಾ ಪಂಚಾಯತಿ ಸಿಇಒ ಪ್ರಸನ್ನ, ಉಪವಿಭಾಗಧಿಕಾರಿ ಎಸ್.ಆರ್.ರಶ್ಮಿ, ಉಡುಪಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾಂಗ್ರೆಸ್ ಮುಖಂಡರಾದ ಉದಯ್ ಕುಮಾರ್ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಉಪಸ್ಥಿತರಿದ್ದರು.