ಮಂಗಳೂರು, ಆ 29 (DaijiworldNews/MS): ಜಿಲ್ಲೆಯಲ್ಲಿ ಸಣ್ಣ ಕೈಗಾರಿಕೆಗಳು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತದ ವ್ಯಾಪ್ತಿಯಲ್ಲಿರುವ ಸ್ಥಳಗಳ ಪಟ್ಟಿ ಒದಗಿಸುವಂತೆ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಪುರ ಅವರು ಕೆಎಸ್ಎಸ್ಐಡಿಸಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಆ. 28ರ ಸೋಮವಾರ ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಇಲಾಖಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಜಿಲ್ಲೆಯಲ್ಲಿ ಭೂಮಿಗೆ ಹೆಚ್ಚಿನ ಬೆಲೆ ಇದೆ. ಈ ನಿಟ್ಟಿನಲ್ಲಿ ಇಲಾಖೆಯ ವ್ಯಾಪ್ತಿಗೊಳಪಡುವ ಜಾಗಗಳು ಅತಿಕ್ರಮಣವಾಗದಂತೆ ಎಚ್ಚರ ವಹಿಸಬೇಕು ಹಾಗೂ ಅತಿಕ್ರಮಣವಾದಲ್ಲೀ ಒತ್ತುವರಿಯನ್ನು ತೆರವುಗೊಳಿಸಬೇಕು ಹಾಗೂ ಆ ಜಾಗಕ್ಕೆ ಬೇಲಿ ಹಾಕಿ ರಕ್ಷಿಸಬೇಕು ಎಂದು ಸೂಚನೆ ನೀಡಿದರು.
ಪುತ್ತೂರು - ಸುಳ್ಯ ಮಾರ್ಗದಲ್ಲಿರುವ ಅರಿಯಡ್ಕದಲ್ಲಿ 5 ಎಕರೆ ಪ್ರದೇಶದಲ್ಲಿ ಇಂಡಸ್ಟ್ರಿಯಲ್ ಎಸ್ಟೇಟ್ ನಿರ್ಮಾಣಕ್ಕೆ ನಿವೇಶನ ಮಂಜೂರಾಗಿದ್ದು, ಅಲ್ಲಿ ಇಂಡಸ್ಟ್ರಿಯಲ್ ಎಸ್ಟೇಟ್ ನಿರ್ಮಾಣಕ್ಕೆ ಪೂರಕ ಕ್ರಮಗಳನ್ನು ಕೂಡಲೇ ಕೈಗೊಳ್ಳಬೇಕೆಂದು ಅವರು ಹೇಳಿದರು.
ಜಿಲ್ಲೆಯಲ್ಲಿ ಸಣ್ಣಸಣ್ಣ ಕೈಗಾರಿಕಾ ಘಟಕಗಳ ಕಾರ್ಯನಿರ್ವಹಣೆ ಬಗ್ಗೆ ಮಾಹಿತಿ ಪಡೆದ ಸಚಿವರು, ಅವುಗಳ ಸ್ಥಾಪನೆಗೆ ಬೇಡಿಕೆ ಇರುವ ಬಗ್ಗೆ ಸಮೀಕ್ಷೆ ನಡೆಸಿ ಮಾಹಿತಿ ನೀಡುವಂತೆ ತಿಳಿಸಿದರು.
ಕೆಲವು ಕಡೆಗಳಲ್ಲಿ ಯುಜಿಡಿ ಕಾಮಗಾರಿ ಅಪೂರ್ಣಗೊಂಡಿರುವ ಬಗ್ಗೆ ಪರಿಶೀಲಿಸುವಂತೆ ತಿಳಿಸಿದ ಅವರು ಪ್ಲಾಸ್ಟಿಕ್ ಪಾರ್ಕ್ ಕ್ಲಸ್ಟಟ್೯ ನಲ್ಲಿ ಸಣ್ಣ ಕೈಗಾರಿಕಾ ಘಟಕಗಳ ಅನುಕೂಲತೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಜಿಲ್ಲಾ ಕೈಗಾರಿಕಾ ಇಲಾಖೆಯ ಉಪನಿರ್ದೇಶಕ ಮಂಜುನಾಥ್ ಹೆಗ್ಡೆ, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತದ ಸಹಾಯಕ ಮ್ಯಾನೇಜರ್ ರಾಯಪ್ಪ, ಜಿಲ್ಲಾ ಖಾದಿ ಮತ್ತು ಗ್ರಾಮೋದ್ಯೋಗ ಇಲಾಖೆಯ ಅಧಿಕಾರಿ ನವಜ್ಯೋತಿ ನಾಯಕ್ ಹಾಗೂ ಇತರೆ ಅಧಿಕಾರಿಗಳು ಸಭೆಯಲ್ಲಿದ್ದರು.