ಮಂಗಳೂರು,ಆ 29 (DaijiworldNews/AK): ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ ಇಂದು ಬೆಳಗ್ಗೆ ಮಂಗಳೂರು ನಗರದ ಹೊರವಲಯ ಪಡೀಲ್ ನಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಜಿಲ್ಲಾಧಿಕಾರಿ ಕಚೇರಿಯ ಕಟ್ಟಡದ ಕಾಮಗಾರಿಗಳನ್ನು ಪರಿಶೀಲಿಸಿ, ಸಲಹೆ ಸೂಚನೆಗಳನ್ನು ನೀಡಿದರು.
ಈ ವೇಳೆ ಜಿಲ್ಲೆಯ ಜನರ ಸಮಸ್ಯೆಗಳನ್ನು ಕಾಲಮಿತಿಯೊಳಗೆ ಇತ್ಯರ್ಥಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನಿರೀಕ್ಷಿತವಾಗಿ ಸರಕಾರಿ ಕಚೇರಿಗಳಿಗೆ ಭೇಟಿ ನೀಡಿ ಆಡಳಿತ ವ್ಯವಸ್ಥೆ ಗೆ ಚುರುಕು ಮುಟ್ಟಿಸುವ ಪ್ರಯತ್ನ ಮಾಡಲಾಗಿದೆ ಎಂದರು.
ಕಂದಾಯ ಇಲಾಖೆಯ ತಳಮಟ್ಟದ ಕಚೇರಿಗಳಾದ ವಿಎ,ನಾಡಕಚೇರಿ,ತಹಶೀಲ್ದಾರ್,ಸಬ್ ರಿಜಿಸ್ಟ್ರಾರ್ ಕಚೇರಿಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಅಧಿಕಾರಿಗಳು ಯಾವ ರೀತಿ ಜನರ ಸಮಸ್ಯೆ ಗಳಗಳಿಗೆ ಸ್ಪಂದಿಸುತ್ತಿದ್ದಾರೆ ಎನ್ನುವುದನ್ನು ಪರಿಶೀಲನೆ ನಡೆಸಲಾಗಿದೆ. ಅಧಿಕಾರಿಗಳು ಕಾಲಮಿತಿಯೊಳಗೆ ಕೆಲಸ ಮಾಡಿಕೊಡಲು ಸೂಚನೆ ನೀಡಲಾಗಿದೆ ಎಂದರು.
ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭೆಗೆ ಭೇಟಿ ನೀಡಿದ ಕಂದಾಯ ಸಚಿವರು ಗ್ರಾಮಲೆಕ್ಕಾಧಿಕಾರಿ ಕಚೇರಿಯ ಕಾರ್ಯಚಟುವಟಿಕೆಗಳ ಬಗ್ಗೆ ಗ್ರಾಮ ಲೆಕ್ಕಾಧಿಕಾರಿ ಲಾವಣ್ಯ ಅವರಿಂದ ಸಮಗ್ರ ಮಾಹಿತಿ ಪಡೆದರು.
ಉಳ್ಳಾಲದ ಮುಕ್ಕಚೇರಿಯ ಪ್ರಾಥಮಿಕ ಶಾಲೆಗೆ ಸಚಿವರು ಭೇಟಿ ನೀಡಿ ಪರಿಶೀಲಿಸಿದರು. ಇದೇ ವೇಳೆ ನಾಟೇಕಲ್ ನಲ್ಲಿರುವ ಉಳ್ಳಾಲ ತಾಲ್ಲೂಕು ಕಚೇರಿಗೆ ಭೇಟಿ ನೀಡಿದರು. ಅಲ್ಲದೇ ಮಂಗಳೂರು ತಾಲೂಕು ಕಚೇರಿ, ಉಪನೋಂದಣಿ ಕಚೇರಿಯನ್ನ ಕಂದಾಯ ಸಚಿವರು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್, ಕಂದಾಯ ಇಲಾಖೆಯ ಆಯುಕ್ತ ಸುನಿಲ್ ಕುಮಾರ್ ಹಾಗೂ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.