ಮಂಗಳೂರು, ಎ10(SS): ಸದ್ಯ ಕರಾವಳಿಯಲ್ಲಿ ಲೋಕಸಭಾ ಚುನಾವಣೆಯ ಬಿಸಿ ಕಾವೇರುತ್ತಿದ್ದು, ಪ್ರಚಾರದ ಭರಾಟೆಯೂ ಜೋರಿದೆ. ಮತ್ತೂಂದೆಡೆ ರಾಜಕೀಯ ಪಕ್ಷಗಳ ಮುಖಂಡರಿಂದ ಧಾರ್ಮಿಕ ಕೇಂದ್ರಗಳ ಭೇಟಿಯೂ ಭರ್ಜರಿಯಾಗಿಯೇ ನಡೆಯುತ್ತಿದೆ. ಲೋಕಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅಭ್ಯರ್ಥಿಗಳು ಹಾಗೂ ಬೆಂಬಲಿಗರು ತಮ್ಮ ಎದುರಾಳಿಗಳನ್ನು ಸೋಲಿಸಲು ಹಲವು ತಂತ್ರಗಳನ್ನು ಉಪಯೋಗಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ಘಟಾನುಘಟಿ ನಾಯಕರು ಕರಾವಳಿಗೆ ಬಂದು ತಮ್ಮ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ತೊಡಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಲೋಕಸಭಾ ಚುನಾವಣೆ ಪ್ರಚಾರಕ್ಕೆ ಎಪ್ರಿಲ್ 13 ರಂದು ರ್ಯಾಲಿಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿಯವರು ಮಂಗಳೂರಿಗೆ ಆಗಮಿಸುತಿದ್ದಾರೆ. ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಪರ ಮೋದಿ ಮಂಗಳೂರಿನಲ್ಲಿ ಪ್ರಚಾರ ನಡೆಸಲಿದ್ದಾರೆ.
ಈ ನಿಟ್ಟಿನಲ್ಲಿ ನರೇಂದ್ರ ಮೋದಿ ಬೃಹತ್ ಸಮಾವೇಶದಲ್ಲಿ ಸ್ವಪಕ್ಷೀಯ ಕಾರ್ಯಕರ್ತ ಬಂಧುಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಲು ಮಂಗಳೂರು ನಗರ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಮನವಿ ಮಾಡಿದ್ದಾರೆ.