ಮಂಗಳೂರು, ಸೆ. 08 (DaijiworldNews/SM): 2023ನೇ ಸಾಲಿನ ಡಿಸಿಇಟಿ ಪರೀಕ್ಷೆಯು ನಗರದ ಕೊಡಿಯಾಲ್ಬೈಲ್ ನ ಎಂ.ಜಿ ರಸ್ತೆಯಲ್ಲಿರುವ ಕೆನರಾ ಪದವಿ ಪೂರ್ವ ಕಾಲೇಜು ಹಾಗೂ ಬಲ್ಮಠದಲ್ಲಿರುವ ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ಈ ಹಿನ್ನೆಲೆ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ವಿಧಿಸಲಾಗಿದೆ.
ಈ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸಲು ಇದೇ ಸೆ.9ರ ಶನಿವಾರ ಮಧ್ಯಾಹ್ನ 1ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ಮಂಗಳೂರು ನಗರ ಪೆÇಲೀಸ್ ಕಮೀಷನರೇಟ್ ವ್ಯಾಪ್ತಿಯ ಕೆನರಾ ಪದವಿ ಪೂರ್ವ ಕಾಲೇಜು ಎಂ.ಜಿ.ರಸ್ತೆ, ಕೊಡಿಯಾಲ್ ಬೈಲ್, ಮಂಗಳೂರು ಹಾಗೂ ಸರಕಾರಿ ಮಹಿಳಾ ಪದವಿಪೂರ್ವ ಕಾಲೇಜ್, ಬಲ್ಮಠ, ಮಂಗಳೂರು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಕಲಂ: 144 ಸಿ.ಆರ್.ಪಿ.ಸಿ ಕಾಯ್ದೆಯನ್ವಯ ನಿಷೇಧಾಜ್ಞೆಯನ್ನು ವಿಧಿಸಿ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳೂ ಆಗಿರುವ ಉಪ ಪೊಲೀಸ್ ಆಯುಕ್ತರಾದ ಸಿದ್ಧಾರ್ಥ್ ಗೋಯಲ್ ಅವರು ಆದೇಶಿಸಿದ್ದಾರೆ.
ಈ ಅವಧಿಯಲ್ಲಿ :
ನಿಷೇಧಿತ ಪ್ರದೇಶದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಅಭ್ಯರ್ಥಿಗಳನ್ನು ಹೊರತುಪಡಿಸಿ ಸಾರ್ವಜನಿಕರು ಐದು ಅಥವಾ ಐದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದು, ತಿರುಗಾಡುವುದನ್ನು ನಿಷೇಧಿಸಲಾಗಿದೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು, ಇನ್ನಾವುದೇ ವಸ್ತುಗಳನ್ನು ಹಂಚುವುದು. ರವಾನಿಸುವುದು ಇತ್ಯಾದಿ ಚಟುವಟಿಕೆಗಳನ್ನು ಸಂಪೂರ್ಣ ನಿಷೇಧಿಸಿದೆ.
ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಕ್ಷಾರಕ (ಆಸಿಡ್), ಸ್ಫೋಟಕ ವಸ್ತುಗಳನ್ನು ಕೊಂಡುಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ. ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಹಾಗೂ ಇನ್ನಿತರ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ಅವಧಿಯವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶದಲ್ಲಿ ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸುವುದನ್ನು ನಿಷೇಧಿಸಿದೆ.
ನಿಷೇಧಿತ ವಲಯದಲ್ಲಿ ಮೊಬೈಲ್ ದೂರವಾಣಿ, ಬ್ಲೂಟೂತ್ ಹಾಗೂ ಪೇಜರ್ ಇತ್ಯಾದಿ ಎಲೆಕ್ಟ್ರಾನಿಕ್ಸ್ ಸಂಪರ್ಕ ಉಪಕರಣಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.