ಮಂಗಳೂರು, ಸೆ 13 (DaijiworldNews/HR): 'ಡ್ರಗ್ಸ್ ಫ್ರಿ ಮಂಗಳೂರು' ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಮುಂದುವರಿಸಿದ ಕಾರ್ಯಾಚರಣೆಯಲ್ಲಿ ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ಓರ್ವನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಉಳ್ಳಾಲ ಮುಕ್ಕಚೇರಿ ಒಂಭತ್ತುಕೆರೆ ನಿವಾಸಿ ಅಬ್ದುಲ್ ಸವಾಜ್ ಆಲಿಯಾಸ್ ಚವ್ವಾ(30) ಬಂಧಿತ ಆರೋಪಿ.
ಒಂಭತ್ತು ಕೆರೆ ಪರಿಸರದಲ್ಲಿ ದ್ವಿಚಕ್ರ ವಾಹನವೊಂದರಲ್ಲಿ ಅಕ್ರಮವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಇನ್ನು ಆರೋಪಿಯ ವಶದಲ್ಲಿದ್ದ ಒಟ್ಟು 25 ಗ್ರಾಂ ತೂಕದ 1,25,000 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, ಹೋಂಡಾ ಆಕ್ಟಿವಾ ಸ್ಕೂಟಿ, ಮೊಬೈಲ್ ಫೋನ್, 2,120 ರೂ. ನಗದು, ಡಿಜಿಟಲ್ ತೂಕ ಮಾಪನ ಸಹಿತ ಒಟ್ಟು 2,17,000 ರೂ. ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
ಆರೋಪಿ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.