ಮಂಗಳೂರು, ಸೆ 22 (DaijiworldNews/Ak): “ಡ್ರಗ್ಸ್ ಫ್ರಿ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಈ ದಿನ ಮುಂದುವರಿಸಿದ ಮತ್ತೊಂದು ಕಾರ್ಯಾಚರಣೆಯಲ್ಲಿ ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಎಂಡಿಎಂಎನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಉಳ್ಳಾಲಸುಭಾಷ್ನಗರ ಮನೆ ಜಾಕೀರ್ (29) ,ಬಂಟ್ವಾಳ ತಾಲೂಕು ಫರಂಗಿಪೇಟೆ, ಅರ್ಕುಳ ಗ್ರಾಮ ಕಾರ್ತಿಕ್ ಸುವರ್ಣ(27), ಬಂಧಿತರು.
ಬಂಧಿತರಿಂದ ಒಟ್ಟು 20 ಗ್ರಾಂ ತೂಕದ ರೂ. 1,00,000 ಮೌಲ್ಯದ ಎಂಡಿಎಂಎ ಮಾದಕ ವಸ್ತು, ಹೊಂಡಾ ಅಕ್ಟಿವಾ ಸ್ಕೂಟರ್, ಮೊಬೈಲ್ ಫೋನ್ ಗಳು-2, ನಗದು ರೂ. 3300 ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 2,15,000 ಅಂದಾಜಿಸಲಾಗಿದೆ.
ಆರೋಪಿಗಳ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.
ಆರೋಪಿಗಳ ಪೈಕಿ ಜಾಕೀರ್ ಎಂಬಾತನ ವಿರುದ್ಧ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರತ ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆಗೆ ಯತ್ನಿಸಿದ ಪ್ರಕರಣ ದಾಖಲಾಗಿರುತ್ತದೆ.
ಇನ್ನೋರ್ವ ಆರೋಪಿ ಕಾರ್ತಿಕ್ ಎಂಬಾತನ ವಿರುದ್ದ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ದ್ವಿಚಕ್ರ ವಾಹನ ಕಳ್ಳತನ ಮಾಡಿದ ದಾಖಲಾಗಿರುತ್ತದೆ.
ಈ ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯವನ್ನು ಮಂಗಳೂರು ನಗರದ ಪೊಲೀಸ್ ಆಯುಕ್ತರವರಾದ ಅನುಪಮ್ ಅಗರ್ ವಾಲ್ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಯವರು ನಡೆಸಿದ್ದಾರೆ.