ಮಂಗಳೂರು, ಸೆ 25 (DaijiworldNews/HR): ಸಾರ್ವಜನಿಕರ ಕುಂದುಕೊರತೆ ಆಲಿಸುವ ಚೊಚ್ಚಲ ಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಲು ಸೆ.25ರ ಸೋಮವಾರ ಬೆಳಿಗ್ಗೆಯೇ ಆಗಮಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ನಗರದ ಕುದ್ಮುಲ್ ರಂಗರಾವ್ ಟೌನ್ ಹಾಲ್ ನಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ನೋಂದಾಯಿಸಲು ತೆರೆಯಲಾಗಿದ್ದ ಸುಮಾರು 60ಕ್ಕೂ ಹೆಚ್ಚು ಇಲಾಖೆಗಳ ವ್ಯಾಪ್ತಿಗೊಳಪಡುವ ವಿವಿಧ ಇಲಾಖೆಗಳ ಕೌಂಟರ್ ಗಳಿಗೆ ಭೇಟಿ ನೀಡಿದರು.
ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಲು ಕಂದಾಯ, ಮೀನುಗಾರಿಕೆ, ಆಹಾರ, ಕೃಷಿ, ಕೈಗಾರಿಕೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್, ರೇಷ್ಮೆ , ತೋಟಗಾರಿಕೆ, ಪಶುಸಂಗೋಪನೆ, ಅರಣ್ಯ, ಕಾರ್ಮಿಕ, ಕಂದಾಯ, ವಿಕಲಚೇತನ ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ ಹೀಗೆ ಪ್ರಮುಖ ಇಲಾಖೆಯ ಮಳಿಗೆ ಹಾಕಲಾಗಿತ್ತು.
ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ನಗರ ಪೊಲೀಸ್ ಆಯುಕ್ತ ಅನುಪಮ್ ಅರ್ಗವಾಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ.ಬಿ., ಮುಖಂಡರು ಜತೆಯಲ್ಲಿದ್ದರು.