ಮಂಗಳೂರು, ಸೆ 26 (DaijiworldNews/HR): ಜಿಲ್ಲಾಡಳಿತ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ಕಂದಾಯ ಇಲಾಖೆ, ಎನ್ ಡಿ ಆರ್ಎಫ್, ಎಸ್ ಡಿ ಆರ್ ಎಫ್, ಅಗ್ನಿಶಾಮಕ ದಳ, ಪೊಲೀಸ್ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಉಪ್ಪಿನಂಗಡಿಯ ಸಹಸ್ರ ಲಿಂಗೇಶ್ವರ ದೇವಸ್ಥಾನದ ಬಳಿ ಸೆ. 27ರ ಬುಧವಾರ ಬೆಳಗ್ಗೆ 10 ಗಂಟೆಗೆ ನದಿಯಲ್ಲಿ ದಿಢೀರ್ ಪ್ರವಾಹ ಉಂಟಾದರೆ ಅದರಿಂದ ರಕ್ಷಿಸಿಕೊಳ್ಳುವ ಅಣಕು ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಅವರು ತಿಳಿಸಿದರು.
ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಸೆ. 26ರ ಮಂಗಳವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಉಪ್ಪಿನಂಗಡಿಯ ಸಹಸ್ರ ಲಿಂಗೇಶ್ವರ ದೇವಸ್ಥಾನದ ಹತ್ತಿರ ಹರಿಯುವ ನೇತ್ರಾವತಿ ನದಿಯಲ್ಲಿ ಒಮ್ಮಿಂದೊಮ್ಮೆಲೆ ಪ್ರವಾಹ ಎದುರಾದರೆ ಅದರಿಂದ ಜನ-ಜಾನುವಾರುಗಳನ್ನು ರಕ್ಷಿಸುವ ಅಣಕು ಪ್ರದರ್ಶನವನ್ನು ಹಮ್ಮಿಕೊಳ್ಳಲಾಗುತ್ತಿದೆ, ಇದಕ್ಕೆ ಕಂದಾಯ, ಪೊಲೀಸ್ ಇಲಾಖೆ ಸೇರಿದಂತೆ ಸಂಬಂಧಿಸಿದ ಎಲ್ಲಾ ಇಲಾಖೆಗಳು ಕೈಗೊಳ್ಳಬೇಕಾದ ಅಗತ್ಯ ಕ್ರಮಗಳು ಹಾಗೂ ಕೈಗೊಂಡಿರುವ ಪೂರ್ವಭಾವಿ ಸಿದ್ಧತೆಗಳ ಬಗ್ಗೆ ಈ ಅಣಕು ಪ್ರದರ್ಶನದಲ್ಲಿ ಸಾರ್ವಜನಿಕರಿಗೆ ತಿಳಿಯಲಿದೆ. ಆದ್ದರಿಂದ ಸಂಬಂಧಿಸಿದ ಎಲ್ಲಾ ಇಲಾಖೆಗಳು ಭಾಗವಹಿಸಿ, ಪ್ರವಾಹದ ಸಂದರ್ಭದಲ್ಲಿ ಅವರ ಸನ್ನದ್ದತೆಯ ಬಗ್ಗೆ ಕ್ರಮವಹಿಸಬೇಕು ಎಂದವರು ನಿರ್ದೇಶನ ನೀಡಿದರು.
ಸಾರ್ವಜನಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಅಣಕು ಪ್ರದರ್ಶನವನ್ನು ಸಾರ್ವಜನಿಕರು ಹಾಗೂ ವಿದ್ಯಾ ಶಾಲಾ ವಿದ್ಯಾರ್ಥಿಗಳಿಗೆ ವೀಕ್ಷಿಸಲು ಅನುಮತಿ ಇರುವುದಾಗಿಯೂ ಅವರು ತಿಳಿಸಿದರು.
ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವಿಜಯಕುಮಾರ್ ಸಭೆಯಲ್ಲಿ ಭಾಗವಹಿಸಿದ್ದರು.