ಮಂಗಳೂರು, ಎ13(SS): ಈಗಾಗಲೇ ಚುನಾವಣಾ ಆಯೋಗವು ಲೋಕಸಭೆ ಚುನಾವಣೆಯನ್ನು ಘೋಷಿಸಿದ್ದು, ಭರದ ತಯಾರಿ ನಡೆಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎ.18ರಂದು ಮತದಾನ ನಡೆಯಲಿದ್ದು, ಆ ದಿನದಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ.
ಲೋಕಸಭಾ ಕ್ಷೇತ್ರಗಳ ಅರ್ಹ ಮತದಾರರಾಗಿರುವ ಎಲ್ಲ ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಮತ್ತು ಇನ್ನಿತರ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಪ್ರಜಾಪ್ರಾತಿನಿಧ್ಯ ಕಾಯ್ದೆಯಡಿನ ಎಲ್ಲ ಉಪಬಂಧಗಳಿಗೆ ಒಳಪಟ್ಟು ವೇತನ ಸಹಿತ ರಜೆ ನೀಡಲು ಆದೇಶಿಸಲಾಗಿದೆ.
ರಾಜ್ಯ ಸರಕಾರಿ ಕಚೇರಿಗಳಿಗೆ, ಶಾಲಾ, ಕಾಲೇಜುಗಳಿಗೆ ಮತ್ತು ಸರಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ಎ.18ರಂದು ಸಾರ್ವತ್ರಿಕ ರಜೆಯನ್ನು ಘೋಷಿಸಿದೆ. ಈ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ. ತುರ್ತು ಸೇವೆಯಡಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಪ್ರಕಟನೆ ತಿಳಿಸಿದೆ.