ಮಂಗಳೂರು,ಅ 06 (DaijiworldNews/HR): 12 ವರ್ಷದ ಹಿಂದೆ ನಡೆದ ಸುಳ್ಯ ಕೆವಿಜಿ ಪಾಲಿಟೆಕ್ನಿಕ್ ಪ್ರಾಂಶುಪಾಲರಾಗಿದ್ದ ಪ್ರೊ. ಎ.ಎಸ್ ರಾಮಕೃಷ್ಣ ಅವರ ಕೊಲೆಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೊಳಗಾಗಿರುವ ಡಾ.ರೇಣುಕಾ ಪ್ರಸಾದ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
2011ರ ಏ.28ರಂದು ನಡೆದಿದ್ದ ಎ.ಎಸ್.ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ಆರು ಆರೋಪಿಗಳನ್ನು ಖುಲಾಸೆಗೊಳಿಸಿ ಅಧೀನ ನ್ಯಾಯಾಲಯ ನೀಡಿದ್ದ ತೀರ್ಪನ್ನು ಕಳೆದ ವಾರವಷ್ಟೆ ರದ್ದುಗೊಳಿಸಿದ್ದ ಹೈಕೋರ್ಟ್ ಅವರು ದೋಷಿಗಳೆಂದು ತೀರ್ಪು ನೀಡಿತ್ತು. ಡಾ.ರೇಣುಕಾಪ್ರಸಾದ್ ಹಾಗೂ ಇತರೆ ಐವರು ಆರೋಪಿಗಳು ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವುದು ಸಾಕ್ಷ್ಯಾಧಾರಗಳ ಸಮೇತ ದೃಢಪಟ್ಟಿದೆ ಎಂದು ತೀರ್ಮಾನಿಸಿದ್ದ ಹೈಕೋರ್ಟ್ ಎಲ್ಲರನ್ನೂ ಕೊಲೆ ಮತ್ತು ಅಪರಾಧಿಕ ಒಳಸಂಚು ಅಪರಾಧ ಕೃತ್ಯದಲ್ಲಿ ದೋಷಿಗಳನ್ನಾಗಿಸಿತ್ತು. ಆದರೆ ಏಳನೇ ಆರೋಪಿಯಾಗಿದ್ದ ಹೆಚ್.ಯು.ನಾಗೇಶ್ ಕುಮಾರ್ ಅವರನ್ನು ಖುಲಾಸೆಗೊಳಿಸಿದ ಅಧೀನ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು.
ಇನ್ನು ಅಪರಾಧಿಗಳಾದ ಡಾ.ರೇಣುಕಾಪ್ರಸಾದ್, ಮನೋಜ್ ರೈ, ಎಚ್.ಆರ್. ನಾಗೇಶ್, ವಾಮನ್ ಪೂಜಾರಿ, ಭವಾನಿಶಂಕರ್ ಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಲಾಯಿತು. ಇಂದು ಹಾಜರಾಗದ ಶರಣ್ ಗೆ ಶಿಕ್ಷೆ ಪ್ರಮಾಣ ಪ್ರಕಟಿಸಲಾಗಿಲ್ಲ.
ಡಾ. ರೇಣುಕಾ ಪ್ರಸಾದ್ ಅವರಿಗೆ 10 ಲಕ್ಷ ರೂ. ದಂಡವೂ ವಿಧಿಸಲಾಗಿದ್ದು, ಅದನ್ನು ಕೊಲೆಗೀಡಾದ ರಾಮಕೃಷ್ಣ ಕುಟುಂಬಕ್ಕೆ ನೀಡುವಂತೆ ಆದೇಶಿಸಲಾಗಿದೆ.