ಮಂಗಳೂರು, ಅ 19 (DaijiworldNews/AK/AA): ದಸರಾ ಹಬ್ಬದ ಪ್ರಯುಕ್ತ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಮುಖ್ಯ ರಸ್ತೆಗಳಲ್ಲಿ ಅಳವಡಿಸಲಾಗಿರುವ ಅಲಂಕಾರಿಕ ವಿದ್ಯುತ್ ದೀಪಗಳಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದರೆ ದಂಡ ವಿಧಿಸುವ ಮೂಲಕ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಂದು ಮನಪಾ ಆಯುಕ್ತ ಆನಂದ ಸಿ.ಎಲ್ ಎಚ್ಚರಿಕೆ ನೀಡಿದ್ದಾರೆ.
ದಸರಾ ಹಬ್ಬದ ಪ್ರಯುಕ್ತ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಹಲವು ಸ್ಥಳಗಳಲ್ಲಿ ಸಾರ್ವಜನಿಕ ಹಾಗೂ ಖಾಸಗಿ ಸಂಘ ಸಂಸ್ಥೆಗಳು ಅನಧಿಕೃತವಾದ ಫ್ಲೆಕ್ಸ್, ಬ್ಯಾನರ್ಗಳನ್ನು ಅಳವಡಿಸಿ, ಅವುಗಳಿಗೆ ಅಲಂಕಾರಿಕ ದೀಪಗಳನ್ನು ಹಾಕಿರುವುದು ಕಂಡುಬಂದಿದೆ.
ಅಲ್ಲದೇ ಅವುಗಳಿಗೆ ಅಲಂಕಾರಿಕ ದೀಪಗಳನ್ನು ಅಳವಡಿಸಲು ಪಾಲಿಕೆಯ ವಿದ್ಯುತ್ ಕಂಬಗಳಿಂದ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಜೊತೆಗೆ ದಂಡವನ್ನು ವಿಧಿಸಲಾಗುವುದು ಎಂದು ತಿಳಿಸಲಾಗಿದೆ.
ಈ ರೀತಿಯಾಗಿ ಅಕ್ರಮ ವಿದ್ಯುತ್ ಸಂಪರ್ಕ ಪಡೆದು ಯಾವುದೇ ಅವಘಡಗಳು ಸಂಭವಿಸಿದರೆ ಅವರನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಲಾಗಿದೆ.