ಮಂಗಳೂರು, ನ 1 (DaijiworldNews/MS): ತಂಬಾಕು ಉತ್ಪನ್ನಗಳ ಮಾರಾಟದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಅನಿವಾರ್ಯತೆ ಎಂದು ಮಹಾನಗರ ಪಾಲಿಕೆ ಮಹಾಪೌರರಾದ ಸುಧೀರ್ ಶೆಟ್ಟಿ ತಿಳಿಸಿದರು.
ಅವರು ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಮಹಾನಗರ ಪಾಲಿಕೆ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಮಹಾನಗರಪಾಲಿಕೆಯ ಕಚೇರಿಯ ಸಭಾಂಗಣದಲ್ಲಿ ನಡೆದ ತಂಬಾಕು ಉತ್ಪನ್ನಗಳ ಮಾರಾಟ ಪರವಾನಿಗೆ ನೀತಿ ಕುರಿತು ಪಾಲಿಕೆಯ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳ ಒಂದು ದಿನದ ಕಾರ್ಯಗಾರ ತರಬೇತಿಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವರ್ಷಕ್ಕೆ 75 ಲಕ್ಷಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಜನರು ತಂಬಾಕು ಸೇವನೆಯಿಂದ ಉಂಟಾಗುವ ರೋಗಗಳಿಗೆ ತುತ್ತಾಗಿ ಸಾವನ್ನಪ್ಪುತ್ತಿದ್ದಾರೆ. ಇತ್ತೀಚೆಗೆ ಯುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ತಂಬಾಕು ಮತ್ತು ಮಾದಕ ವಸ್ತು ಬಳಸುವುದು ಹೆಚ್ಚಾಗಿದೆ. ತಂಬಾಕು ಉತ್ಪನ್ನಗಳ ಮಾರಾಟ ಪರವಾನಿಗೆ ನೀತಿಯ ಪರಿಣಾಮಕಾರಿ ಅನುಷ್ಟಾನ ನಡೆಸಿದ್ದಲ್ಲಿ ಹಾಗೂ ಕಾನೂನುಬಾಹಿರವಾಗಿ ತಂಬಾಕು ಉತ್ಪನ್ನಗಳ ಮಾರಾಟದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾದ ಅನಿವಾರ್ಯ ಇದೆ. ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಎಲ್ಲರೂ ಕೈ ಜೋಡಿಸಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ನಗರ ಪಾಲಿಕೆ ಆಯುಕ್ತರಾದ ಆನಂದ್ ಸಿ.ಎಲ್ ಪಾಲಿಕೆ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಪ್ರತ್ಯೇಕ ಪರವಾನಿಗೆ ನೀತಿಯನ್ನು ಸರ್ಕಾರ ನಿರ್ದೇಶನದಂತೆ ಶೀಘ್ರವೇ ಅನುಷ್ಟಾನಗೊಳಿಸುವುದಾಗಿ ತಿಳಿಸಿದರು.
ತಂಬಾಕು ಸೇವನೆಯಿಂದ ಶರೀರದ ಪ್ರತಿಯೊಂದು ಅಂಗಾಂಗದ ಮೇಲೆ ಪರಿಣಾಮ ಬೀರುತ್ತದೆ, ಇದಕ್ಕೆ ಯುವ ಜನತೆ ನಾನಾ ಪ್ರಕಾರದ ರೋಗಗಳಿಗೆ ಬಲಿಯಾಗುತ್ತಿದ್ದಾರೆ ಇದನ್ನು ತಡೆಗಟ್ಟುವ ಜವಾಬ್ದಾರಿ ನಮ್ಮ ನಿಮ್ಮೆಲ್ಲರದಾಗಿದೆ ಎಂದು ಜಿಲ್ಲಾ ತಂಬಾಕು ನಿಯಂತ್ರಣಕೋಶದ ಕಾರ್ಯಕ್ರಮಾಧಿಕಾರಿ ಡಾಕ್ಟರ್ ನವೀನ್ ಚಂದ್ರ ಕುಲಾಲ್ ಮಾತನಾಡಿದರು.ಉಪ ಮಹಾಪೌರ ಸುನಿತಾ ಬೆಂಗ್ರೆ ರಾಜ್ಯ ತಂಬಾಕು ನಿಯಂತ್ರಣ ಕೋಶದ ವಿಭಾಗೀಯ ಸಂಯೋಜಕರು ಜೇಲ್ ಥಾಮಸ್, ಮತ್ತಿತ್ತರು ಉಪಸ್ಥಿತರಿದ್ದರು.