ಕುಂದಾಪುರ, ನ 04 (DaijiworldNews/MS): ಭ್ರಷ್ಟಾಚಾರದ ಬೇರು ಎಲ್ಲೆಡೆಯಲ್ಲಿಯೂ ಪಸರಿಸಿದೆ. ಪ್ರತಿಯೊಬ್ಬರೂ ತಮ್ಮ ಆತ್ಮಸಾಕ್ಷಿಯನ್ನು ಅರ್ಥ ಮಾಡಿಕೊಂಡರೆ ಭ್ರಷ್ಟಾಚಾರ ನಿಗ್ರಹ ಸಾಧ್ಯ ಎಂದು ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಅಬ್ದುಲ್ ರಹೀಮ್ ಹುಸೇನ್ ಶೇಖ್ ಹೇಳಿದರು.
ಅವರು ಶುಕ್ರವಾರ ಬೆಳಿಗ್ಗೆ ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ (ಲ) ಕುಂದಾಪುರ ಅಭಿಯೋಗ ಇಲಾಖೆ ಹಾಗೂ ತಾಲೂಕು ಆಡಳಿತ ಕುಂದಾಪುರ ಇವರ ಆಶ್ರಯದಲ್ಲಿ ನಡೆದ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹ 2023 ಅಂಗವಾಗಿ ಹಮ್ಮಿಕೊಂಡಿರುವ ಕಾನೂನು ಮಾಹಿತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕುಂದಾಪುರದ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ರಾಜು ಎನ್ ಮಾತನಾಡಿ, ಸಮಾಜದ ಪ್ರತಿಯೊಬ್ಬ ನಾಗರೀಕನೂ ಕಾನೂನು ಮಾಹಿತಿಗಳ ಅತಿವು ಹೊಂದಬೇಕು. ಲಂಚ ಸ್ವೀಕರಿಸುವಷ್ಟೇ ಕೊಡುವವನೂ ಅಪರಾಧಿಯಾಗುತ್ತಾನೆ. ಭ್ರಷ್ಟಾಚಾರ ನಿರ್ಮೂಲನೆ ಪ್ರತಿಯೊಬ್ಬ ನಾಗರೀಕನ ಕರ್ತವ್ಯವಾಗಿದೆ ಎಂದರು.
ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ, ಎಸ್.ಆರ್. ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಧೀಶೆ ರೋಹಿಣಿ ಡಿ., ಕುಂದಾಪುರ ವಕೀಲರ ಸಂಘದ ಅಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ, ತಹಸೀಲ್ದಾರ್ ಶೋಭಾ ಲಕ್ಷ್ಮಿ, ಡಿವೈಎಸ್ಪಿ ಬೆಳ್ಳಿಯಪ್ಪ ಕೆ.ಯು, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಶಶಿಧರ ಕೆ.ಜಿ., ಸಹಾಯಕ ಸರ್ಕಾರಿ ಅಭಿಯೋಜಕ ಉದಯ್ ಕುಮಾರ್ ಬಿ.ಎ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಜೆ, ಶ್ರೀನಾಥ ರಾವ್ ಉಪಸ್ಥಿತರಿದ್ದರು.
ವಂಡ್ಸೆ ಕಂದಾಯ ಅಧಿಕಾರಿ ರಾಘವೇಂದ್ರ ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.