ಮಂಗಳೂರು,04 (DaijiworldNews/RA): ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಕುಖ್ಯಾತ ಸರಗಳ್ಳನೊಬ್ಬನನ್ನು ಬಂಧಿಸಿ ಲಕ್ಷಾಂತರ ರೂ.ಮೌಲ್ಯದ ಸ್ವತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಮನಗರ ಜಿಲ್ಲೆಯ ಬಿಡದಿಯ ಕಣಮಿನಿಕೆ ಗೇಟ್ ನಿವಾಸಿ ಚಂದ್ರಶೇಖರ ಅಲಿಯಾಸ್ ಡಾರ್ಲಿಂಗ್ ಚಂದ್ರ(29) ಬಂಧಿತ ಆರೋಪಿಯಾಗಿದ್ದಾನೆ.
ಈತನಿಂದ ಸುಮಾರು 2,41,000 ರೂ. ಮೌಲ್ಯದ ಸ್ವತ್ತುಗಳನ್ನು ಅಧಿಕಾರಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಅ. 21 ಮಂಗಳೂರು ನಗರದ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬಿಜೈ ಚರ್ಚ್ ಮೈನ್ ರೋಡ್ ನಲ್ಲಿ ಬೆಳಗಿನ ಜಾವ ಮಹಿಳೆಯೊಬ್ಬರು ವಾಕಿಂಗ್ ಮಾಡುತ್ತಿದ್ದಾಗ ಇಬ್ಬರು ಅಪರಿಚಿತ ಯುವಕರು ಬೈಕ್ ನಲ್ಲಿ ಬಂದು ಮಹಿಳೆಯ ಕುತ್ತಿಗೆಯಿಂದ ಸರ ಸುಲಿಗೆ ಮಾಡಿದ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದ ಆರೋಪಿ ಪತ್ತೆಗೆ ಸಿಸಿಬಿ ಘಟಕದಿಂದ ವಿಶೇಷ ತಂಡವನ್ನು ರಚಿಸಿ ಆರೋಪಿಯನ್ನು ದಸ್ತಗಿರಿ ಮಾಡಿ ಲಕ್ಷಾಂತರ ರೂ. ಮೌಲ್ಯದ ಚಿನ್ನದ ಸರ ಮತ್ತು ಕೃತ್ಯಕ್ಕೆ ಬಳಸಿದ ಮೋಟಾರ್ ಸೈಕಲ್ ಅನ್ನು ಸ್ವಾಧೀನಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಯು ಬಂಗ್ರ ಕೂಳೂರು ಬಳಿ ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಈ ದಾಳಿ ನಡೆಸಿ ಬಂಧಿಸುವಲ್ಲಿ ಯಶಸ್ಸಿಯಾಗಿದ್ದಾರೆ..ಇದೇ ವೇಳೆ ಆರೋಪಿಯು ಸುಲಿಗೆ ಮಾಡಿದ್ದ 21.300 ಗ್ರಾಂ ತೂಕದ ತುಂಡಾದ ಚಿನ್ನದ ಕರಿಮಣಿ ಸರ ಮತ್ತು ಕೃತ್ಯಕ್ಕೆ ಉಪಯೋಗಿಸಿದ ಮೋಟಾರ್ ಸೈಕಲ್ ಮತ್ತು ಮೊಬೈಲ್ ಫೋನ್ ಸ್ವಾಧೀನಪಡಿಸಿಕೊಂಡಿದ್ದಾರೆ.
ಇನ್ನು ಈ ಹಿಂದೆ ಆರೋಪಿ ವಿರುದ್ಧ ರಾಮನಗರ ಜಿಲ್ಲೆಯ ಹಾರೋಹಳ್ಳಿ ಪೊಲೀಸ್ ಠಾಣೆ, ಕುಂಬ್ಳಗೋಡು, ಬಿಡದಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದಾಬಸ್ ಪೇಟೆ ಹಾಗೂ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಸುಲಿಗೆ, ಕೊಲೆ, ಕೊಲೆಯತ್ನ ಹಾಗೂ ಹಲ್ಲೆ ಪ್ರಕರಣಗಳು ದಾಖಲಾಗಿವೆ.
ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಮಾರ್ಗದರ್ಶನ, ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿ ಸಿದ್ದಾರ್ಥ ಗೋಯಲ್, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಅವರ ನಿರ್ದೇಶನದಲ್ಲಿ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ.ಹೆಗಡೆ ಅವರ ನೇತೃತ್ವದಲ್ಲಿ ನಡೆಸಲಾಗಿದ್ದು, ಸಿಸಿಬಿ ಘಟಕದ ಅಧಿಕಾರಿಗಳು ಮತ್ತು ಸಿಬಂದಿಗಳು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.