ಉಡುಪಿ, ಡಿ13 (DaijiworldNews/MS): ಉಡುಪಿಯಲ್ಲಿ ಜನವರಿ ತಿಂಗಳಲ್ಲಿ ನಡೆಯಲಿರುವ ಉಡುಪಿ ಶ್ರೀ ಪುತ್ತಿಗೆ ಮಠದ ಪರ್ಯಾಯ ಮಹೋತ್ಸವಕ್ಕೆ ಪರ್ಯಾಯ ಸಮಿತಿಯ ಮತ್ತು ಜಿಲ್ಲೆಯ ಶಾಸಕರು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಇತರ ಗಣ್ಯರಿಗೆ ಭೇಟಿ ಮಾಡಿ ಆಹ್ವಾನವನ್ನು ನೀಡಿದರು.
ಕಾರ್ಯಧ್ಯಕ್ಷರು ಹಾಗೂ ಉಡುಪಿ ನಿಕಟಪೂರ್ವ ಶಾಸಕರಾದ ಕೆ ರಘುಪತಿ ಭಟ್ ಅವರು ಉಡುಪಿ ಶ್ರೀ ಪುತ್ತಿಗೆ ಮಠದ ಪರ್ಯಾಯ ಮಹೋತ್ಸವ ಸಮಿತಿ ಪದಾಧಿಕಾರಿಗಳೊಂದಿಗೆ ಇಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿಯವರಾದ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪರ್ಯಾಯ ಮಹೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಿದರು. ಬಳಿಕ ವಿಧಾನ ಸಭೆಯ ಸಭಾಧ್ಯಕ್ಷರಾದ ಯು. ಟಿ. ಖಾದರ್, ಉಪ ಮುಖ್ಯಮಂತ್ರಿಯವರಾದ ಡಿ. ಕೆ. ಶಿವಕುಮಾರ್, ವಿಪಕ್ಷ ನಾಯಕರಾದ ಆರ್. ಅಶೋಕ್, ಗೃಹ ಸಚಿವರಾದ ಡಾಕ್ಟರ್ ಜಿ. ಪರಮೇಶ್ವರ್, ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಶಿವರಾಜ್ ತಂಗಡಗಿ, ವಿಧಾನ ಪರಿಷತ್ ಸದಸ್ಯರಾದ ಬಿ. ಕೆ ಹರಿಪ್ರಸಾದ್ ಅವರನ್ನು ಭೇಟಿಯಾಗಿ ಉಡುಪಿ ಪರ್ಯಾಯ ಮಹೋತ್ಸವದ ಆಹ್ವಾನ ಪತ್ರಿಕೆಯನ್ನು ನೀಡಿ ಉಡುಪಿಯ ಜನತೆಯ ಪರವಾಗಿ ಆಹ್ವಾನಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರು, ಶಾಸಕರಾದ ವಿ. ಸುನೀಲ್ ಕುಮಾರ್, ಯಶ್ ಪಾಲ್ ಸುವರ್ಣ, ಸುರೇಶ್ ಶೆಟ್ಟಿ ಗುರ್ಮೆ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಶೆಟ್ಟಿ ಗಂಟಿಹೊಳಿ ಹಾಗೂ ಪರ್ಯಾಯ ಸಮಿತಿಯ ಪ್ರಮುಖರು ಉಪಸ್ಥಿತರಿದ್ದರು.