ಉಡುಪಿ, ಡಿ 19 (DaijiworldNews/MS): ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ತ್ವರಿತವಾಗಿ ಪೂರ್ಣಗೊಳಿಸು ವುದರೊಂದಿಗೆ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಮುಂದಾಗಬೇಕು ಎಂದು ರಾಷ್ಟ್ರೀಯ ಹೆದ್ದಾರಿ ವಿಭಾಗದ ಇಂಜಿನಿಯರ್ ಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಸೂಚನೆ ನೀಡಿದರು.
ಹೆದ್ದಾರಿ 66 ಮತ್ತು 169, 169ಎ ಗೆ ಸಂಬಂಧಿಸಿದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಸ್ತುತ ಸಾರ್ವಜನಿಕ ಬಳಕೆಯಲ್ಲಿರುವ ರಸ್ತೆಯನ್ನು ಉನ್ನತೀಕರಣಗೊಳಿಸಿ ಕೈಗೊಂಡಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದ್ಯತೆ ಮೇಲೆ ಗುಣಮಟ್ಟದೊಂದಿಗೆ ತ್ವರಿತವಾಗಿ ಪೂರ್ಣಗೊಳಿಸಬೇಕು. ತಪ್ಪಿದ್ದಲ್ಲಿ ಸದರಿ ರಸ್ತೆಗಳಲ್ಲಿ ಸಂಚರಿಸುತ್ತಿರುವ ಸಾರ್ವಜನಿಕ ವಾಹನಗಳ ಸಂಚಾರಕ್ಕೆ ಅನಾನೂಕೂಲವಾಗಲಿದೆ ಎಂದರು.
ಕರಾವಳಿ ಬೈಪಾಸ್ ನಿಂದ ಮಲ್ಪೆ ವರೆಗೆ ಹೆದ್ದಾರಿ ರಸ್ತೆ ನಿರ್ಮಾಣ ಹಾಗೂ ಅಗಲೀಕರಣಕ್ಕೆ ಅಗತ್ಯವಿರುವ ಜಾಗವನ್ನು ಭೂ ಸ್ವಾಧೀನ ಕಾರ್ಯದಲ್ಲಿರುವ ತಾಂತ್ರಿಕ ತೊಂದರೆಗಳನ್ನು ಇಲಾಖೆ ಅಧಿಕಾರಿ ಹಾಗೂ ರಾಷ್ಟ್ರೀಯ ಹೆದ್ದಾರಿ ಸಮನ್ವಯ ದೊಂದಿಗೆ ಸರಿಪಡಿಸಿಕೊಂಡು ಭೂ ಸ್ವಾಧೀನ ಕಾರ್ಯವನ್ನು ಕೈಗೊಂಡು ಕಾಮಗಾರಿಗಳನ್ನು ಪ್ರಾರಂಭಿಸಬೇಕು ಎಂದರು.
ಉಡುಪಿ ನಗರದ ಇಂದ್ರಾಳಿ ಮೇಲ್ಸೇತುವೆ ಯ ಕಾಮಗಾರಿಗಳನ್ನು ನಿಗಧಿತ ಕಾಲಾವಧಿಯಲ್ಲಿ ಪೂರ್ಣಗೊಳಿಸಿ ಸದೇ ಇರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಈ ಸ್ಥಳಗಳಲ್ಲಿ ಸಾರ್ವಜನಿಕ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗು ವುದರ ಜೊತೆಗೆ ಅಪಘಾತಗಳು ಸಹ ನಡೆಯುತ್ತವೆ. ಮುಂದಿನ ದಿನಗಳಲ್ಲಿ ಈ ರೀತಿ ಮುಂದುವರೆದರೆ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಸಂತೆಕಟ್ಟೆ ಅಂಡರ್ ಪಾಸ್ ರಸ್ತೆ ಕಾಮಗಾರಿಗಳಿಗೆ ಗುಣಮಟ್ಟದೊಂದಿಗೆ ಆಗುತ್ತಿಲ್ಲ ಹಾಗೂ ಕಾಮಗಾರಿಗಳು ಮಂದಗತಿಯಲ್ಲಿ ಸಾಗುತ್ತಿವೆ ಎಂಬ ದೂರುಗಳು ಕೇಳಿ ಬರುತ್ತಿವೆ. ಗುತ್ತಿಗೆದಾರರು ಹಾಗೂ ಸಂಬಂಧಪಟ್ಟ ಅಭಿಯಂತರರುಗಳು ಈ ಬಗ್ಗೆ ಎಚ್ಚರಿಕೆ ವಹಿಸಿ ಕಾರ್ಯ ನಿರ್ವಹಿಸಬೇಕು. ಆದಷ್ಟು ತ್ವರಿತ ಗತಿಯಲ್ಲಿ ಕೆಲಸಕಾರ್ಯಗಳನ್ನು ಮುಗಿಸಬೇಕು ಎಂದರು.
ಶಾಸಕ ಸುನೀಲ್ ಕುಮಾರ್ ಮಾತನಾಡಿ, ಸಾಣೂರಿನ ಗ್ರಾಮ ಪಂಚಾಯತಿ ಮುಂಭಾಗದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸರ್ವೀಸ ರಸ್ತೆಯ ಅತ್ಯವಶ್ಯಕತೆಯಿದೆ. ಇದನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ತೊಂದರೆಯಾಗಲಿದೆ ಎಂದ ಅವರು, ಸಾಣೂರು ಬಳಿಯ ಸೇತುವೆ ಕಾಮಗಾರಿಯ ವೇಗವನ್ನು ಹೆಚ್ಚಿಸಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಪೌರಾಯುಕ್ತ ರಾಯಪ್ಪ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಮೊಹಮದ್ ಅಜ್ಮಿ, ಗುತ್ತಿಗೆದಾರರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.