ಉಡುಪಿ, ಜ 17 (DaijiworldNews/MS): ಐತಿಹಾಸಿಕ ಶ್ರೀಕೃಷ್ಣ ಮಠದ ಪರ್ಯಾಯ ಮಹೋತ್ಸವಕ್ಕೆ ಸರ್ಕಾರ ಪೂರ್ಣ ಸಹಕಾರ ನೀಡುತ್ತಿದ್ದು, ನಗರೋತ್ಥಾನ ಅಭಿವೃದ್ಧಿಗಾಗಿ ಈಗಾಗಲೇ 30 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದ್ದಾರೆ.
ಉಡುಪಿಯಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು.
ಶ್ರೀಮಠದ ಪರ್ಯಾಯಕ್ಕೆ ಮುಖ್ಯಮಂತ್ರಿಯವರು 10 ಕೋಟಿ ರೂಪಾಯಿ ಬಿಡುಗಡೆ ಮಾಡಲು ಕ್ರಮ ವಹಿಸಿದ್ದಾರೆ. ಇದೇ ಮೊದಲ ಬಾರಿಗೆ ಉಡುಪಿ ಪರ್ಯಾಯ ಮಹೋತ್ಸವದಲ್ಲಿ ಕುಟುಂಬ ಸಮೇತ ಪಾಲ್ಗೊಳ್ಳುತ್ತಿರುವೆ. ಪರ್ಯಾಯ ಮಹೋತ್ಸವಕ್ಕೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ.
ವಿವಿಧ ಕಾರಣಗಳಿಂದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರು ಪರ್ಯಾಯ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ. ಆದರೆ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ .
ಅನಂತಕುಮಾರ ಹೆಗಡೆಗೆ ತಿರುಗೇಟು:
ಕಳೆದ ನಾಲ್ಕೂವರೆ ವರ್ಷಗಳಿಂದ ಸುದ್ದಿಯಲ್ಲಿರದ ಬಿಜೆಪಿ ಸಂಸದ ಅನಂತಕುಮಾರ ಹೆಗಡೆಯವರು ಚುನಾವಣೆ ಸಮೀಪಿಸುತ್ತಿರುವಂತೆ ದಿಢೀರ್ ಮುನ್ನೆಲೆಗೆ ಬಂದಿದ್ದಾರೆ. ಅವರಿಗೆ ಕಾಂಗ್ರೆಸ್ ಮತ್ತು ಮುಖ್ಯಮಂತ್ರಿಯವರನ್ನು ಟೀಕಿಸುವ ಯಾವುದೇ ನೈತಿಕತೆ ಇಲ್ಲ ಎಂದು ಹೆಳಿದ್ದಾರೆ.
ಜವಾಬ್ದಾರಿಯಿಲ್ಲದ ಸಂಸದರು
ಬೆಳಗಾವಿಯ ಖಾನಾಪುರ ಕೂಡ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಆದರೆ, ಈವರೆಗೆ ಒಮ್ಮೆಯೂ ಸಂಸದರು ಭೇಟಿ ನೀಡಿಲ್ಲ. ಜನರ ಸಮಸ್ಯೆಗಳನ್ನು ಆಲಿಸಿಲ್ಲ. ಆದರೀಗ ಪ್ರಚೋದನಾತ್ಮಕ ಹೇಳಿಕೆಗಳನ್ನು ನೀಡುತ್ತ ಮುನ್ನಲೆಗೆ ಬರುತ್ತಿದ್ದಾರೆ. ಸಂಸದರಾಗಿ ಜವಾಬ್ದಾರಿ ಸ್ಥಾನದಲ್ಲಿರುವವರು ಜವಾಬ್ದಾರಿಯುತವಾಗಿ ಮಾತನಾಡುವುದೂ ಮುಖ್ಯ. ಮೊದಲಿನಿಂದಲೂ ಇಂತಹ ಹೇಳಿಕೆಗಳನ್ನು ನೀಡುವುದೇ ಅವರ ಕೆಲಸವಾಗಿದೆ ಎಂದಿದ್ದಾರೆ