ಉಡುಪಿ, ಜ 29 (DaijiworldNews/HR): ಅಯೋಧ್ಯಾ ರಾಮ ಮಂದಿರದ ಉದ್ಘಾಟನೆಯ ಸಂದರ್ಭದಲ್ಲೂ ಸಿಎಂ ಸಿದ್ದಾರಮಯ್ಯ ಅವರು ಹಿಂದುಗಳಿಗೆ ನೋವಾಗುವ ರೀತಿಯಲ್ಲಿ ಮಾತನಾಡಿದ್ದಾರೆ. ಪದೇಪದೆ ನಮ್ಮನ್ನು ಕೆಣಕಿದರೇ ನಾವು ಸುಮ್ಮನೆ ಇರುವುದಿಲ್ಲ. ನಮಗೂ ಶಕ್ತಿ ಇದೆ, ದೊಡ್ಡ ಕಾರ್ಯಕರ್ತರ ಬಲ ಇದೆ. ರಾಜ್ಯ ಸರ್ಕಾರ ಮತ್ತೆ ಇಂತಹ ಧೋರಣೆ ಮುಂದುವರಿಸಿದೆ ತೀವ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಎಚ್ಚರಿಕೆ ನೀಡಿದರು.
ಉಡುಪಿಯಲ್ಲಿ ಜಿಲ್ಲಾ ಬಿಜೆಪಿ ಕಾರ್ಯಾಲಯದ ಮುಂಭಾಗದಲ್ಲಿ ಸೋಮವಾರ, ಕಾಂಗ್ರೆಸ್ ಸರ್ಕಾರದ ವಿರುದ್ಧ ನಡೆಸಿದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಪದೇಪದೆ ಹಿಂದು ಧಮೀರ್ಯರ ಮೇಲೆ ದೌರ್ಜನ್ಯ ಎಸಗುತ್ತಿದೆ. ಮಂಡ್ಯದಲ್ಲಿ ಬಿಜೆಪಿಯವರು ಏರಿಸಿದ್ದ ಹನುಮಾಧ್ವಜವನ್ನು ಅಧಿಕಾರಿಗಳ ಮೂಲಕ ತೆರವು ಮಾಡಿಸಿದ್ದು, ಹಿಂದುಗಳ ಭಾವನೆಗೆ ಧಕ್ಕೆ ತಂದಿದೆ ಎಂದರು.
ಪ್ರತಿಭಟನೆಯಲ್ಲಿ ಜಿಲ್ಲಾ ಬಿಜೆಪಿ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಮಂಗಳೂರು ವಿಭಾಗ ಪ್ರಭಾರಿ ಉದಯ್ ಕುಮಾರ್ ಶೆಟ್ಟಿ, ಜಿಲ್ಲಾ ವಕ್ತಾರ ರಾಘವೇಂದ್ರ ಕಿಣಿ, ಉಡುಪಿ & ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಕುತ್ಯಾರ್ ನವೀನ್ ಶೆಟ್ಟಿ, ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಪ್ರ.ಕಾರ್ಯದರ್ಶಿ ಶಿಲ್ಪಾ ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ, ರಾಜ್ಯ ಎಸ್ಟಿ ಮೋರ್ಚಾ ಕಾರ್ಯದರ್ಶಿ ಉಮೇಶ್ ನಾಯ್ಕ್, ಅಲ್ಪಸಂಖ್ಯಾತರ ಮೋರ್ಚಾ ಜಿಲ್ಲಾಧ್ಯಕ್ಷ ದಾವೂದ್ ಅಬೂಬಕ್ಕರ್ ಹಾಗೂ ವಿವಿಧ ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಪ್ರತಿಭಟನೆಯ ಬಳಿಕ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಮಣಿಪಾಲದ ಜಿಲ್ಲಾಧಿಕಾರಿಗೆ ತೆರಳಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಜಿಲ್ಲಾಧಿಕಾರಿಯವರ ಪರವಾಗಿ ಅಪರ ಜಿಲ್ಲಾಧಿಕಾರಿ ಮನವಿಯನ್ನು ಸ್ವೀಕರಿಸಿದರು.