ಮಂಗಳೂರು,ಫೆ 07(DaijiworldNews/MS): ಕರಾವಳಿ ನಿಯಂತ್ರಣ ವಲಯ ಉಲ್ಲಂಘನೆ ಕುರಿತಂತೆ ವರದಿ ಸಿದ್ಧಪಡಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅರಣ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಅವರು ಮಂಗಳವಾರ ಮಂಗಳೂರಿನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯವರ ಕಚೇರಿಯಲ್ಲಿ ಪರಿಸರ ಮತ್ತು ಅರಣ್ಯ ಇಲಾಖೆಯ ಪರಾಮರ್ಶೆ ಸಭೆ ನಡೆಸಿ ಮಾಥನಾಡಿದರು. ಕರ್ನಾಟಕದ ಕರಾವಳಿ ತೀರದಲ್ಲಿ ನಿರ್ಮಾಣ ಮಾಡಲಾಗಿರುವ ಕಟ್ಟಡಗಳ ಪಟ್ಟಿಯನ್ನು ಸಿದ್ಧಪಡಿಸಿ ಇವುಗಳಲ್ಲಿ ನಿಯಮ ಉಲ್ಲಂಘಿಸಿರುವವರ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡುವಂತೆ ತಿಳಿಸಿದ್ದಾರೆ.
ಮಂಗಳೂರು ವೃತ್ತದಲ್ಲಿ ಸೆಕ್ಷನ್ 4 ಆಗಿ ಸೆಕ್ಷನ್ 17 ಆಗದ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ ಸಚಿವರು, ಒಂದೇ ಸರ್ವೆ ನಂಬರ್ ನಲ್ಲಿ ಸಾವಿರಾರು ಎಕರೆ ಅರಣ್ಯ ಮತ್ತು ಕಂದಾಯ ಭೂಮಿ ಇರುವ ಪ್ರದೇಶಗಳಲ್ಲಿ ತ್ವರಿತವಾಗಿ ಜಂಟಿ ಸರ್ವೆ ನಡೆಸಿ ಸಮಸ್ಯೆ ಪರಿಹರಿಸಲು ಸೂಚಿಸಿದರು.
ಮಂಗಳೂರು ವೃತ್ತದಲ್ಲಿ ಕಡಲಕೊರೆತ ತಡೆಯಲು ಕಾಂಡ್ಲಾ ವನ (ಮ್ಯಾಂಗ್ರೋ)ಬೆಳೆಸುವಂತೆ ಮತ್ತು ಕಡಲ ತೀರದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಶೇಖರಣೆ ಆಗದಂತೆ ಕ್ರಮ ವಹಿಸಲು ಸೂಚನೆ ನೀಡಿದರು.
ಕಡಲಾಮೆ ಮೊಟ್ಟೆ ಪತ್ತೆಹಚ್ಚಿದ ಮೀನುಗಾರರಿಗೆ ಬಹುಮಾನ:
ತಣ್ಣೀರು ಬಾವಿಯ ಕಡಲ ತೀರದಲ್ಲಿ ಅಪರೂಪದ ಆಲಿವ್ ರೆಡ್ಲಿ ಕಡಲಾಮೆ ಮೊಟ್ಟೆ ಇಟ್ಟಿರುವುದನ್ನು ಪತ್ತೆ ಮಾಡಿ ಸಂರಕ್ಷಣೆಗೆ ನೆರವಾದ ಸಸಿ ತ್ಲು ಗ್ರಾಮದ ಮೀನುಗಾರರಾದ ಆನಂದ ಕೋಟ್ಯಾನ್ ಮತ್ತು ವಾಸು ಕೋಟ್ಯಾನ್ ಅವರಿಗೆ ಸಚಿವರು 5 ಸಾವಿರ ರೂಪಾಯಿಗಳ ಬಹುಮಾನ ಮತ್ತು ಪ್ರಶಂಸಾ ಪತ್ರ ಪ್ರದಾನ ಮಾಡಿದರು.