ಮಂಗಳೂರು, ಮಾ 16(DaijiworldNews/MS): ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾಗುವ ಕೆಲವು ಪ್ರಕರಣಗಳಲ್ಲಿ ಸಂತ್ರಸ್ತರ ಜಾತಿ ಪ್ರಮಾಣ ಪತ್ರದಲ್ಲಿ ಆರ್.ಡಿ ಸಂಖ್ಯೆ ಇಲ್ಲದೆ ಇರುವುದರಿಂದ, ಚಾರ್ಜ್ ಶೀಟ್ ಪಟ್ಟಿ ತಯಾರಿಸಲು ವಿಳಂಬವಾಗುತ್ತಿದ್ದು ಜಿಲ್ಲೆಯ ಎಲ್ಲಾ ತಹಶೀಲ್ದಾರರು ಮೂರರಿಂದ ನಾಲ್ಕು ದಿನಗಳೊಳಗೆ ಆರ್.ಡಿ ಸಂಖ್ಯೆ ಇರುವ ಜಾತಿ ಪ್ರಮಾಣ ಪತ್ರವನ್ನು ನೀಡುವಂತೆ ಅಪರ ಜಿಲ್ಲಾಧಿಕಾರಿ ಡಾ. ಜಿ ಸಂತೋಷ್ ಕುಮಾರ್ ಅವರು ಸೂಚಿಸಿದರು.
ಅವರು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಒಂದು ಉದ್ಯೋಗ ಸಂಸ್ಥೆ ಸ್ಥಾಪಿಸಿ, ನುರಿತ ತರಬೇತುದಾರರಿಂದ ಉದ್ಯೋಗಿಗಳಿಗೆ ತರಬೇತಿ ನೀಡುವ ವ್ಯವಸ್ಥೆ ಕಲ್ಪಿಸಿದರೆ, ಜಿಲ್ಲೆಯ ವಿದ್ಯಾರ್ಥಿಗಳಿಗೆ ಉದ್ಯೋಗ ದೊರೆಯಬಹುದೆಂಬ ಸಮಿತಿ ಸದಸ್ಯರ ಪ್ರಸ್ತಾಪಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅಪರ ಜಿಲ್ಲಾಧಿಕಾರಿಯವರು ಜಿಲ್ಲಾ ಕೌಶಲ್ಯ ಅಭಿವೃದ್ಧಿ ಇಲಾಖೆ ವತಿಯಿಂದ ಈ ಕುರಿತು ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಪತ್ರಿಕಾ ಪ್ರಕಟಣೆ ನೀಡುವಂತೆ ಜಿಲ್ಲಾ ಕೌಶಲ್ಯ ಅಭಿವೃದ್ಧಿ ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪರಿಶಿಷ್ಟ ಜಾತಿ, ಪಂಗಡ ದೌರ್ಜನ್ಯ ತಡೆ ಕಾಯ್ದೆಯಡಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಹಲ್ಲೆ ಮತ್ತು ಜಾತಿನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣಗಳು ತನಿಖೆಯ ಹಂತದಲ್ಲಿದೆ ಎಂದು ಜಿಲ್ಲಾ ಅಪರ ಪೊಲೀಸ್ ವರಿಧಿಕಾರಿ ಧರ್ಮಪ್ಪ ಅವರು ಮಾಹಿತಿ ನೀಡಿದರು.
ಪರಿಶಿಷ್ಟ ಜಾತಿ, ಪಂಗಡ ದೌರ್ಜನ್ಯ ಕಾಯ್ದೆಯಡಿ ಮಂಗಳೂರು ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಸಂತ್ರಸ್ತರ ಆರ್ ಡಿ ಸಂಖ್ಯೆ ಇರುವ ಜಾತಿ ಪ್ರಮಾಣ ಪತ್ರ ಬಾಕಿ ಉಳಿದಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಚರ್ಚೆಯಲ್ಲಿ ಮಂಗಳೂರು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಅದು ಪರಿಶೀಲನೆ ಹಂತದಲ್ಲಿ ಇದೆ ಎಂದು ಮಾಹಿತಿ ನೀಡಿದರು.
ಬಂಟ್ವಾಳ ತಾಲೂಕಿನ ಕಸ್ಬಾ ಗ್ರಾಮದಲ್ಲಿ ನಿವೇಶನವೊಂದರಲ್ಲಿ ಗಿಡಗಂಟೆ ಪೊದೆಗಳು ಬೆಳೆದಿದ್ದು, ವಿಷ ಜಂತುಗಳು ಮನೆಗೆ ಬರುವ ಬಗ್ಗೆ ಹಾಗೂ ಪರಿಸರ ಮಾಲಿನ್ಯವಾಗುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದು, ಬಂಟ್ವಾಳ ತಹಶೀಲ್ದಾರರು ಹಾಗೂ ರೇಂಜ್ ಫಾರೆಸ್ಟ್ ಆಫೀಸರ್ ಇಬ್ಬರು ತಪಾಸಣೆ ನಡೆಸಿ ಬಂಟ್ವಾಳ ಪುರಸಭೆಯ ಮುಖ್ಯ ಅಧಿಕಾರಿಗಳಿಗೆ ವರದಿ ನೀಡುವಂತೆ ಅಪರ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಪರಿಶಿಷ್ಟ ಜಾತಿ, ಪಂಗಡದ ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಒಂದು ವಾರದೊಳಗೆ ಪರಿಹಾರ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.