ಮಂಗಳೂರು, ಮಾ 27(DaijiworldNews/ AK): ಕರ್ನಾಟಕದ ಕರಾವಳಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಬಿಸಿಲು ಧಗೆ ಏರುತ್ತಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ ಮುಂದಿನ ಕೆಲವು ದಿನಗಳ ಕಾಲ ಮಳೆಯಾಗುವ ಲಕ್ಷಣ ಇಲ್ಲ ಎನ್ನಲಾಗುತ್ತಿದೆ.
ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ, ಏಪ್ರಿಲ್ ಮೊದಲ ವಾರದವರೆಗೆ ಇದೇ ಹವಾಮಾನ ಮುಂದುವರಿಯುತ್ತದೆ. ಬಳಿಕ ಮುಂಗಾರು ಪೂರ್ವ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿಯ ಕೆಲವು ಭಾಗಗಳಲ್ಲಿ ಈಗಾಗಲೇ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಬೇಗ ಮಳೆ ಬಾರದಿದ್ದರೆ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತದೆ. ಕರಾವಳಿ ಭಾಗದಲ್ಲಿ ಕಳೆದ ವರ್ಷದಂತೆ ಬಿಸಿಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ಸಂಪ್ರದಾಯದ ಪ್ರಕಾರ, ಕರಾವಳಿ ಪ್ರದೇಶದಲ್ಲಿ ಮಾರ್ಚ್ ಎರಡನೇ ವಾರದಲ್ಲಿ ಪೂರ್ವ ಮುಂಗಾರು ಮಳೆ ಬೀಳಲಿದೆ. ಇನ್ನು ಕೆಲವೇ ದಿನಗಳಲ್ಲಿ ಮಂಗಳೂರಿನಲ್ಲಿ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ದಾಟಲಿದೆ. ಬುಧವಾರ ಮಂಗಳೂರಿನಲ್ಲಿ ಗರಿಷ್ಠ ತಾಪಮಾನ 33.8 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 25.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.