ಕಡಬ, ಮಾ 31(DaijiworldNews/AA): ಅಕ್ರಮ ದನ ಸಾಗಟದ ವಾಹನ ಢಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ಕಡಬದ ಮರ್ಧಾಳ ಜಂಕ್ಷನ್ ನಲ್ಲಿ ನಡೆದಿದೆ.
ಮೃತರನ್ನು ಮರ್ಧಾಳ ನೆಕ್ಕಿತ್ತಡ್ಕ ಸಮೀಪದ ಅಚ್ಚಿಲ ಪಟ್ಟೆ ನಿವಾಸಿ ವಿಠಲ ರೈ(65) ಎಂದು ಗುರುತಿಸಲಾಗಿದೆ.
ಘಟನೆಯನ್ನು ಖಂಡಿಸಿ ಕಡಬ ಆಸ್ಪತ್ರೆಯ ಬಳಿ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ಸ್ಥಳಕ್ಕೆ ಎಸ್ ಪಿ ಅವರು ಬರಬೇಕು. ಅಪಘಾತ ಎಸಗಿದ ಆರೋಪಿಗಳನ್ನು ಬಂಧಿಸುವ ತನಕ ಮೃತದೇಹದ ಅಂತ್ಯ ಸಂಸ್ಕಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಪಟ್ಟು ಹಿಡಿದಿದ್ದರು. ಬಳಿಕ ದ.ಕ ಜಿಲ್ಲಾ ಎಸ್ ಪಿ ರಿಷ್ಯಂತ್ ಅವರು ಸ್ಥಳಕ್ಕೆ ಭೇಟಿ ನೀಡಿ ಆರೋಪಿಗಳನ್ನು ಭಾನುವಾರ ಸಂಜೆಯೊಳಗಾಗಿ ಬಂಧಿಸುವುದಾಗಿ ಭರವಸೆ ನೀಡಿದ್ದಾರೆ. ಈ ಹಿನ್ನೆಲೆ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂತೆಗೆದುಕೊಳ್ಳಲಾಗಿದೆ.
ಇನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಅರಣ್ಕುಮಾರ್ ಪುತ್ತಿಲ ಸೇರಿ ಪ್ರಮುಖರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಜೊತೆಗೆ ಆರೋಪಿಗಳ ಬಂಧನವಾಗದಿದ್ದಲ್ಲಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.
ಶನಿವಾರ ರಾತ್ರಿ ಮೃತ ವಿಠಲ ರೈ ಅವರು ತನ್ನ ಕಾರನ್ನು ಮರ್ಧಾಳದಲ್ಲಿ ನಿಲ್ಲಿಸಿ ರಸ್ತೆ ದಾಟುತ್ತಿದ್ದರು. ಈ ವೇಳೆ ಸುಬ್ರಹ್ಮಣ್ಯ ಕಡೆಯಿಂದ ಕಡಬ ಕಡೆಗೆ ತೆರಳುತ್ತಿದ್ದ ಮಾರುತಿ 800 ಕಾರು ಅವರಿಗೆ ಢಿಕ್ಕಿ ಹೊಡೆದಿದೆ. ವಿಠಲ ಅವರಿಗೆ ಢಿಕ್ಕಿ ಹೊಡೆದು ಕಾರನ್ನು ಚಾಲಕ ನಿಲ್ಲಿಸದೆ ಪರಾರಿಯಾಗಿದ್ದಾನೆ. ಇನ್ನು ಈ ಕಾರಿನಲ್ಲಿ ಚಾಲಕ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ. ಘಟನೆಯ ಬಳಿಕ ಆರೋಪಿಗಳು ಕಾರನ್ನು ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ಎಂಬಲ್ಲಿನ ಮನೆಯೊಂದರ ಮುಂಭಾಗದಲ್ಲಿ ನಿಲ್ಲಿಸಿ ದನವನ್ನು ಪಕ್ಕದ ತೋಟದಲ್ಲಿ ಕಟ್ಟಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಇನ್ನು ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.