ಮಂಗಳೂರು, ಏ 06 (DaijiworldNews/AA): 17-ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ, ಅಭ್ಯರ್ಥಿ ಹಾಗೂ ರಾಜಕೀಯ ಪಕ್ಷಗಳ ಚುನಾವಣಾ ಪ್ರಕ್ರಿಯೆ ಮೇಲೆ ನಿಗಾ ಇರಿಸಲು ಜಿಲ್ಲೆಗೆ ನಿಯೋಜಿತರಾಗಿರುವ ಚುನಾವಣಾ ಸಾಮಾನ್ಯ ವೀಕ್ಷಕರಾದ ಕು. ಆಕಾಂಕ್ಷ ರಂಜನ್ ಮತ್ತು ಚುನಾವಣಾ ವೆಚ್ಚಗಳ ಮೇಲೆ ನಿಗಾ ಇರಿಸಲು ಆಗಮಿಸಿರುವ ವೆಚ್ಚ ವೀಕ್ಷಕರಾದ ಮೆರುಗು ಸುರೇಶ್ ಅವರು, ಜಿಲ್ಲೆಯ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ಸಹಾಯಕ ಚುನಾವಣಾ ಅಧಿಕಾರಿಗಳು, ನೇಮಕಗೊಂಡಿರುವ ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳು ಸೇರಿದಂತೆ ಚುನಾವಣಾ ಕೆಲಸಕ್ಕೆ ನಿಯೋಜಿತರಾಗಿರುವ ತಂಡಗಳ ಮುಖ್ಯಸ್ಥರು ಹಾಗೂ ಅಧಿಕಾರಿಗಳೊಂದಿಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶನಿವಾರ ಸಭೆ ನಡೆಸಿದರು.
ಸಭೆಯಲ್ಲಿ 17-ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ ಮತದಾರರು, ಯುವ ಮತದಾರರು, 85 ವರ್ಷ ಮೇಲ್ಪಟ್ಟ ಹಾಗೂ ವಿಕಲಚೇತನ ಮತದಾರರು, ಮತಗಟ್ಟೆಗಳ ವಿವರ, ಮತದಾರರ ಪಟ್ಟಿಗೆ ಸಂಬಂಧಿಸಿದ ಅರ್ಜಿ ಹಾಗೂ ಸೇವೆಗಳು, ಮಾದರಿ ನೀತಿಸಂಹಿತೆಯ ಅನುಷ್ಠಾನ ಸೇರಿದಂತೆ ಸಮಗ್ರ ಮಾಹಿತಿ ಹಾಗೂ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಲು ಜಿಲ್ಲಾಡಳಿತದಿಂದ ಮಾಡಿಕೊಂಡಿರುವ ಸಿದ್ದತೆಗಳು, ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಜಿಲ್ಲಾ ಚುನಾವಣಾಧಿಕಾರಿಗಳಾದ ಮುಲ್ಲೈ ಮುಗಿಲನ್ ಎಂ.ಪಿ. ಅವರು ಸಮಗ್ರ ಮಾಹಿತಿಯನ್ನು ನೀಡಿದರು.
ಚುನಾವಣೆಗೆ ಸಂಬಂಧಿಸಿದಂತೆ ನೇಮಕಗೊಂಡ ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳು ತಮ್ಮ ವಿಭಾಗದ ಜವಾಬ್ದಾರಿಗಳು ಹಾಗೂ ಇದುವರೆಗೂ ಕೈಗೊಳ್ಳಲಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಹಾಗೂ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ.ಬಿ. ಅವರು ಪೊಲೀಸ್ ಇಲಾಖೆಯಿಂದ ಭದ್ರತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ತಿಳಿಸಿದರು.
ವೇದಿಕೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಅರಣ್ಯ ಉಪ ಸಂರಕ್ಷಣಾಧಿಕಾರಿ ಆಂಥೋಣಿ ಮರಿಯಪ್ಪ ಉಪಸ್ಥಿತರಿದ್ದರು.
ಸಭೆಯಲ್ಲಿ ಸಹಾಯಕ ಚುನಾವಣಾಧಿಕಾರಿಗಳು, ಜಿಲ್ಲಾ ಮಟ್ಟದ ಎಲ್ಲಾ ನೋಡಲ್ ಅಧಿಕಾರಿಗಳು, ತಹಶೀಲ್ದಾರರು, ಸೇರಿದಂತೆ ಚುನಾವಣೆಗೆ ನಿಯೋಜಿತರಾದ ಅಧಿಕಾರಿಗಳು ಪಾಲ್ಗೊಂಡಿದ್ದರು.