ಉಡುಪಿ, ಮೇ 04 (Daijiworld News/SM): ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಕಂಡುಬರಬಹುದಾದ ಎಲ್ಲಾ ಸಮಸ್ಯೆಗಳ ಮತ್ತು ಸಾರ್ವಜನಿಕರ ಸುಗಮ ಸಂಚಾರಕ್ಕೆ ಇರುವ ಅಡಚಣೆ ನಿವಾರಣೆಗೆ ಒಂದು ವಾರದೊಳಗೆ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ನಿರ್ದೇಶಿಸಿದ್ದಾರೆ.
ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮುಂಬರುವ ಮಳೆಗಾಲದಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಸಿದ್ಧತೆ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ ಹಲವೆಡೆ ಹೆದ್ದಾರಿ ಹಾಗೂ ಚರಂಡಿ ಕಾಮಗಾರಿ ಸಮರ್ಪಕ ರೀತಿಯಲ್ಲಿ ಪೂರ್ಣಗೊಳ್ಳದೇ ಮಳೆಗಾಲದಲ್ಲಿ ನೀರು ನಿಂತು ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆ ಇದೆ. ಸರಿಯಾದ ರಿಫ್ಲೆಕ್ಟರ್ ಹಾಗೂ ಫಲಕಗಳನ್ನು ಅಳವಡಿಸದೆ ಜೀವಕ್ಕೆ ಅಪಾಯ ಒದಗಬಹುದು. ಈ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ರಾಷ್ಟ್ರೀಯ ಹೆದ್ದಾರಿ ಇಲಾಖೆಗಳು ಕೂಡಲೇ ಕಾರ್ಯಪ್ರವೃತ್ತವಾಗಿ ಜಿಲ್ಲೆಯಲ್ಲಿರುವ ಎಲ್ಲಾ ಹೆದ್ದಾರಿಗಳಲ್ಲಿ ಮಳೆಗಾಲದಲ್ಲಿ ಯಾವುದೇ ರೀತಿಯ ಸಮಸ್ಯೆ ಎದುರಾಗದಂತೆ ಕ್ರಮ ಕೈಗೊಳ್ಳಲು ಅವರು ನಿರ್ದೇಶಿಸಿದರು. ಈ ವಿಷಯದಲ್ಲಿ ನಿರ್ಲಕ್ಷ್ಯ ತೋರಿದರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸುವುದಾಗಿ ಜಿಲ್ಲಾಧಿಕಾರಿಗಳು ಎಚ್ಚರಿಸಿದರು.