ಮಂಗಳೂರು, ಏ 17 (DaijiworldNews/MS): ಮಂಗಳೂರಿನ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಏಪ್ರಿಲ್ 15ರಿಂದ ಎಸ್.ಎಸ್.ಎಲ್.ಸಿ ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ನಡೆಯಲಿದ್ದು, ಮೌಲ್ಯಮಾಪನ ಕಾರ್ಯವನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಮತ್ತು ಕಾನೂನುಬಾಹಿರ ಚಟುವಟಿಕೆ ಅಹಿತಕರ ಘಟನೆಗಳು ನಡೆಯದಂತೆ, ಮೌಲ್ಯಮಾಪನ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.
ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಕ್ಷಾರಕ, ಆಸಿಡ್, ಸ್ಪೋಟಕಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕಾಯದಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ. ನಿಷೇಧಿತ ಪ್ರದೇಶದಲ್ಲಿ ಪರೀಕ್ಷೆ ಮೌಲ್ಯಮಾಪನ ಕಾರ್ಯಕ್ಕೆ ಸಂಬಂಧಿಸಿದ ಅಧಿಕಾರಿ ಅಥವಾ ಸಿಬ್ಬಂದಿಯವರನ್ನು ಹೊರತುಪಡಿಸಿ ಸಾರ್ವಜನಿಕರು ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದು, ತಿರುಗಾಡುವುದನ್ನು ನಿಷೇಧಿಸಲಾಗಿದೆ. ಮೌಲ್ಯಮಾಪನ ಕೇಂದ್ರದ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಷೇಧಿಸಿದೆ.
ಮೌಲ್ಯಮಾಪನ ಕೇಂದ್ರದ ಆವರಣದಲ್ಲಿ ಮೊಬೈಲ್ ದೂರವಾಣಿ ಬ್ಯೂಟೂತ್ ಇತ್ಯಾದಿ ಎಲೆಕ್ಟ್ರಾನಿಕ್ ಸಂಪರ್ಕ ಉಪಕರಣಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಪೊಲೀಸ್ ಉಪ ಆಯುಕ್ತರು ಹಾಗೂ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳಾದ ಸಿದ್ದಾರ್ಥ್ ಗೋಯಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ