ಮಂಗಳೂರು, ಮೇ.8(DaijiworldNews/AA): ನಗರದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟಿದ್ದ ಘಟನೆಗೆ ಸಂಬಂಧಿಸಿದಂತೆ ಬಾಲಕನನ್ನು ವಶಕ್ಕೆ ಪಡೆಯಲಾಗಿದ್ದು, ಬಂದರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಶಕ್ಕೆ ಪಡೆದ ಬಾಲಕ 17 ವರ್ಷ ಪ್ರಾಯದವನಾಗಿದ್ದು, ಆತನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿ ಬಾಲನ್ಯಾಯ ಮಂಡಳಿ ಮುಂದೆ ಹಾಜರುಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ನಗರದ ವೈದ್ಯಕೀಯ ಕಾಲೇಜೊಂದರ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಪತ್ತೆಯಾಗಿದೆ. ಸಿಸಿ ಕ್ಯಾಮರಾ ಆಧಾರದ ಮೇರೆಗೆ ಪರಿಶೀಲನೆ ನಡೆಸಿದಾಗ ಬಾಲಕನೊಬ್ಬ ಶೌಚಾಲಯದಲ್ಲಿ ಮೊಬೈಲ್ ಇಟ್ಟಿರುವುದು ಪತ್ತೆಯಾಗಿದೆ. ಇದೀಗ ಬಾಲಕನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಶೌಚಾಲಯದಲ್ಲಿ ಯಾರೂ ಇಲ್ಲದ ವೇಳೆ ಮೊಬೈಲ್ ರಿಂಗಣಿಸಿದೆ. ಕೂಡಲೇ ಭದ್ರತಾ ಸಿಬ್ಬಂದಿಯು ಶೌಚಾಲಯವನ್ನು ಪರಿಶೀಲಿಸಿದ್ದಾರೆ. ಈ ವೇಳೆ ಶೌಚಾಲಯದಲ್ಲಿ ಮೊಬೈಲ್ ಪತ್ತೆಯಾಗಿದೆ. ಮೊಬೈಲನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ಬಾಲಕ ರೋಗಿಯ ಸೋಗಿನಲ್ಲಿ ಕಾಲೇಜಿನೊಳಗೆ ಬಂದು ಮೊಬೈಲ್ ಇಟ್ಟಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.