ಕಾರವಾರ, ಮೇ. 19(DaijiworldNews/AA): ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಇದೇ 22ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಉತ್ತರಕನ್ನಡ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚನೆ ನೀಡಿದ್ದಾರೆ.
ಭಾರತೀಯ ಹವಾಮಾನ ಇಲಾಖೆಯು ನೀಡಿದ ಹವಾಮಾನ ಮುನ್ಸೂಚನೆಯಂತೆ ಇದೇ 22 ರವರೆಗೆ ಬಂಗಾಳ ಕೊಲ್ಲಿಯಲ್ಲಿ ವಾಯು ಭಾರ ಕುಸಿತವಾಗುವ ಸಾಧ್ಯತೆ ಇದೆ. ಈ ಹಿನ್ನಲೆಯಲ್ಲಿ ಕರ್ನಾಟಕ ಕರಾವಳಿ ಪ್ರದೇಶಾದ್ಯಂತ 40 ರಿಂದ 55 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ಮುಂಜಾಗ್ರತ ಕ್ರಮವಾಗಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿಯದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು ಕೂಡಲೇ ತೀರಕ್ಕೆ ಹಿಂತಿರುಗುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇನ್ನು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕೈದು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತದಿಂದ ಮೇ 22ರವರೆಗೆ ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಹಾಸನ, ತುಮಕೂರು, ಮಂಡ್ಯ, ರಾಮನಗರ ಜಿಲ್ಲೆಗಳಲ್ಲೂ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಇಲಾಖೆ ವರದಿ ತಿಳಿಸಿದೆ.