ಉಡುಪಿ, ಮೇ.22 (DaijiworldNews/AA): ಕಾರು ಮತ್ತು ಮೀನು ಲಾರಿ ಮುಖಾಮುಖಿ ಢಿಕ್ಕಿಯಾದ ಘಟನೆ ಉಡುಪಿ ಅಂಬಲಪಾಡಿ ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ನಡೆದಿದೆ.
ಘಟನೆ ನಡೆದಾಗ ಮೀನಿನ ಟ್ಯಾಂಕರ್ ಕೇರಳದ ಕಡೆಗೆ ಸಾಗುತ್ತಿತ್ತು. ಈ ಟ್ರಕ್ ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸಿದ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನದಲ್ಲಿ ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.
ಘಟನೆಯಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. ವಿಷಯ ತಿಳಿದ ಉಡುಪಿ ಸಂಚಾರಿ ಪೊಲೀಸರು ಸ್ಥಳಕ್ಕಾಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಇನ್ನು ಲಾರಿಯಲ್ಲಿ ಸಾಗಿಸಲಾಗುತ್ತಿದ್ದ ಮೀನುಗಳನ್ನು ಬೇರೆ ವಾಹನಕ್ಕೆ ಸ್ಥಳಾಂತರ ಮಾಡಲಾಯಿತು.