ಬೆಳ್ತಂಗಡಿ, ಮೇ 25 (DaijiworldNews/AA): ಸರ್ಕಾರದ ಶಕ್ತಿ ಯೋಜನೆಯಿಂದ ರಾಜ್ಯದ ಮೂಲೆ ಮೂಲೆಯಿಂದ ಹೆಚ್ಚಿನ ಭಕ್ತರು ಧರ್ಮಸ್ಥಳಕ್ಕೆ ಆಗಮಿಸಿ ಮಂಜುನಾಥನ ದರ್ಶನ ಪಡೆಯುತ್ತಿದ್ದಾರೆಂದು ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರು ಸಂತೋಷ ಹಂಚಿಕೊಂಡಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆಗೂಡಿ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು, ಡಾ ವೀರೇಂದ್ರ ಹೆಗ್ಗಡೆಯವರ ಜೊತೆ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಹಾಗೂ ಮುಖ್ಯಮಂತ್ರಿಗಳು ಮಂಜುನಾಥನ, ಅಣ್ಣಪ್ಪ ಸ್ವಾಮಿ ಹಾಗೂ ಅಮ್ಮನವರ ದರ್ಶನ ಮಾಡಿದ್ದೇವೆ. ರಾಜ್ಯದಲ್ಲಿ ಮುಂಗಾರು ಪ್ರಾರಂಭವಾಗಿದ್ದು, ಉತ್ತಮ ಮಳೆ, ಬೆಳೆಯಾಗಿ ರಾಜ್ಯದ ಜನರು ಶಾಂತಿ, ನೆಮ್ಮದಿಯಿಂದ ಇರಲಿ ಎಂದು ಪ್ರಾರ್ಥಿಸಿದ್ದೇವೆ. ದೇವರ ದರ್ಶನದ ವೇಳೆ ಅನೇಕ ಮಹಿಳಾ ಭಕ್ತರು ತಮಗೆ ಪ್ರತಿ ತಿಂಗಳು 2 ಸಾವಿರ ಹಣ ಬರುತ್ತಿದೆ ಎಂದು ಸಂತೋಷ ಹಂಚಿಕೊಂಡರು. ಅವರ ಪ್ರಾರ್ಥನೆ ಹಾಗೂ ಆಶೀರ್ವಾದ ನಮಗೆ ಹೆಚ್ಚಿನ ಶಕ್ತಿ ನೀಡುತ್ತದೆ. ಅವರ ಮನೆಯಲ್ಲಿ ಗೃಹಜ್ಯೋತಿ ಬೆಳಗುತ್ತಿದೆ. ಅನ್ನಭಾಗ್ಯ ಸಿಗುತ್ತಿದೆ. ಈ ಯೋಜನೆಗಳನ್ನು ಜಾರಿ ಮಾಡಿರುವುದಕ್ಕೆ ಮಂಜುನಾಥ ನಮಗೆ ಆಶೀರ್ವಾದ ಮಾಡಲಿದ್ದಾನೆ ಎಂದು ನಂಬಿದ್ದೇನೆ ಎಂದು ಹೇಳಿದರು.
ಇನ್ನು ಡಾ ವೀರೇಂದ್ರ ಹೆಗ್ಗಡೆಯವರು ಸರ್ಕಾರದ ಶಕ್ತಿ ಯೋಜನೆ ಬಗ್ಗೆ ಬಹಳ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಯೋಜನೆಯಿಂದಾಗಿ ಪ್ರತಿದಿನ ಸವಿರಾರು ಮಹಿಳೆ ಮಂಜುನಾಥನ ದರ್ಶನಕ್ಕೆಂದು ಧರ್ಮಸ್ಥಳ ಬರುತ್ತಿದ್ದಾರೆ ಮತ್ತು ಕ್ಷೇತ್ರಕ್ಕೆ ಒಳ್ಳೆಯದಾಗುತ್ತಿದೆ ಎಂದಿದ್ದಾರೆ. ಮಾತು ಬಿಡದ ಮಂಜುನಾಥ ಮತ್ತು ಕಾಸು ಬಿಡದ ತಿಮ್ಮಪ್ಪ ಎಂಬ ಮಾತಿನಂತೆ ಮಂಜುನಾಥನ ಆಶೀರ್ವಾದ ನಮ್ಮೆಲ್ಲರ ಮೇಲಿದೆ ಎಂದರು.