ಮಂಗಳೂರು, ಜೂ 26 (DaijiworldNews/MS): ಕಂಪೌಂಡ್ ಗೋಡೆ ಮನೆ ಮೇಲೆ ಉರುಳಿ ಒಂದೇ ಕುಟುಂಬದ ನಾಲ್ವರು ಮಲಗಿದ್ದಲ್ಲೇ ಸಾವನ್ನಪ್ಪಿದ ಘಟನೆ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಮದನಿನಗರ ಎಂಬಲ್ಲಿ ಇಂದು ನಸುಕಿನ ಜಾವ ಸಂಭವಿಸಿದೆ.
ಮನೆಯೊಳಗೆ ವಾಸ್ತವ್ಯ ವಿದ್ದ ರಿಹಾನ ಮಂಝಿಲ್ ಮನೆಯ ಯಾಸಿರ್(45),ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಹಾನ (11)ಮತ್ತು ರಿಫಾನ (17) ಮೃತರು.ಅಬೂಬಕ್ಕರ್ ಎಂಬವರಿಗೆ ಸಂಬಂಧಿಸಿದ ಮನೆಯ ಗೋಡೆ, ಕುಸಿದು ದುರಂತ ಸಂಭವಿಸಿದೆ.
ಯಾಸೀರ್ ಮಂಗಳೂರಿನ ಬಂದರಿನಲ್ಲಿ ಮಡ್ಡಿ ಆಯಿಲ್ ಕಾರ್ಯನಿರ್ವಹಿಸುತ್ತಿದ್ದರು. ರಾತ್ರಿ ಊಟ ಮುಗಿಸಿ ಮನೆಯ ಕೋಣೆಯಲ್ಲಿ ಮಲಗಿದ್ದ ಇಬ್ಬರು ಪುತ್ರಿಯರು ಹಾಗೂ ದಂಪತಿ ಬೆಳಗ್ಗಿನ ಜಾವ ಬೆಳಗ್ಗಿನ ಜಾವ ಇಲ್ಲವಾಗಿದ್ದಾರೆ. ರಾತ್ರಿಯಿಡೀ ಮಳೆಯಾದ ಪರಿಣಾಮ ಕಂಪೌಂಡ್ ವಾಲ್ ಹಾಗೂ ಎರಡು ಅಡಿಕೆ ಮರಗಳು ಯಾಸಿರ್ ಅವರ ಮನೆ ಮೇಲೆ ಉರುಳಿಬಿದ್ದಿದೆ. ರಿಹಾನಾ ಹಾಗೂ ರಿಫಾನ ನಗರದ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಶಾಲೆ ಹಾಗೂ ಕಾಲೇಜಿಗೆ ತೆರಳುತ್ತಿದ್ದರು. ಆರು ವರ್ಷಗಳ ಹಿಂದೆ ಮನೆ ಖರೀದಿಸಿದ್ದ ಇವರು ಒಂದು ವರ್ಷ ಮನೆಯನ್ನು ಲೀಸ್ ಗೆ ನೀಡಿ ಆರು ತಿಂಗಳ ಹಿಂದಷ್ಟೇ ಮನೆಗೆ ವಾಪಸ್ಸಾಗಿದ್ದರು. ಎರಡು ವರ್ಷಗಳ ಹಿಂದೆಯೂ ಮನೆ ಮೇಲೆ ಇದೇ ರೀತಿ ಕಂಪೌಂಡ್ ಕುಸಿದಿದ್ದು, ಯಾವುದೇ ಪ್ರಾಣಾಪಾಯವಾಗಿರಲಿಲ್ಲ.
ಮೂರು ಗಂಟೆಗಳ ಕಾರ್ಯಾಚರಣೆ ಬಳಿಕ ನಾಲ್ಕು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಸ್ಥಳೀಯರು ಮೂರು ಮೃತದೇಹಗಳನ್ನು ಅವಶೇಷಗಳಡಿಯಿಂದ ಹೊರತೆಗೆದರೆ , ಅಗ್ನಿಶಾಮಕ ದಳ ಸ್ಥಳೀಯರ ಜೊತೆ ಎರಡು ಗಂಟೆ ಕಾರ್ಯಾಚರಣೆ ನಡೆಸಿ ಕೊನೆಯ ಮೃತದೇಹವನ್ನು ಹೊರತೆಗೆದಿದ್ದಾರೆ.
ದೊಡ್ಡ ಮಗಳು ರಶೀನಾ ಕೇರಳ ಕಡೆಗೆ ವಿವಾಹ ಮಾಡಿಕೊಡಲಾಗಿದ್ದು, ಬಕ್ರೀದ್ ಗೆಂದು ಬಂದವರು ನಿನ್ನೆಯಷ್ಟೇ ಗಂಡನ ಮನೆಗೆ ವಾಪಸ್ಸಾಗಿದ್ದರು.