ಮಂಗಳೂರು, ಜು 19 (DaijiworldNews/MS): ಕೆಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕರಾವಳಿಯನ್ನು ಹೊರ ಜಿಲ್ಲೆಗಳ ಜತೆಗೆ ಬೆಸೆಯುವ ಎಲ್ಲ ಘಾಟಿ ರಸ್ತೆಗಳಲ್ಲಿ ಗುಡ್ಡ ಕುಸಿತ ಉಂಟಾಗುತ್ತಿದ್ದು, ಕರಾವಳಿಯ ಉಭಯ ಜಿಲ್ಲೆಗಳು ಹೊರ ಸಂಪರ್ಕ ಕಳೆದುಕೊಂಡು ಅಕ್ಷರಶಃ ದ್ವೀಪವಾಗುವ ಭೀತಿ ಎದುರಾಗುತ್ತಿದೆ.
ಇನ್ನೊಂದೆಡೆ ಮಂಗಳೂರು ಮತ್ತು ಬೆಂಗಳೂರನ್ನು ಸಂಪರ್ಕಿಸುವ ಮುಖ್ಯ ಎರಡೂ ರಾಷ್ಟೀಯ ಹೆದ್ದಾರಿಗಳಲ್ಲಿ ಗುಡ್ಡ ಕುಸಿತದಿಂದ ವಾಹನ ಸಂಪರ್ಕ ಕಡಿತಗೊಂಡು ಕರಾವಳಿ ಭಾಗದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ನೈಋತ್ಯ ರೈಲ್ವೆ ಜನರಲ್ ಮ್ಯಾನೇಜರ್ ಮತ್ತು ಮೈಸೂರು ಡಿಆರ್ಎಮ್ ಅವರಿಗೆ ಮಂಗಳೂರು- ಬೆಂಗಳೂರು ನಡುವೆ ಹೆಚ್ಚುವರಿ ರೈಲು ಸೇವೆಯನ್ನು ತುರ್ತಾಗಿ ಪ್ರಾರಂಭಿಸುವಂತೆ ಪತ್ರ ಬರೆದು ವಿನಂತಿಸಿದ್ದಾರೆ.
ಕರಾವಳಿಯ ಬಹಳಷ್ಟು ಜನ ಮಂಗಳೂರು-ಬೆಂಗಳೂರು ನಗರಗಳ ನಡುವೆ ನಿತ್ಯ ಪ್ರಯಾಣಿಸುತ್ತಾರೆ ಎಂಬುದನ್ನು ಗಮನದಲ್ಲಿಟ್ಟುಕೊಂಡು, ಯಾವುದೇ ಇತರ ಸಾರಿಗೆ ವ್ಯವಸ್ಥೆಯಿಲ್ಲದ ಕಾರಣದಿಂದ ಹೆಚ್ಚುವರಿ ರೈಲು ಸೇವೆಯನ್ನು ಒದಗಿಸುವ ಅಗತ್ಯತೆಯಿದೆ. ಹೀಗಾಗಿ, ಶೀಘ್ರದಲ್ಲಿ ಹೆಚ್ಚುವರಿ ರೈಲ್ವೆ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಲು ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ.