ಉಡುಪಿ, ಜು 20 (DaijiworldNews/MS): ನೇಜಾರಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿರುವ ಹಿನ್ನೆಲೆಯಲ್ಲಿ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಕರಣದ ವಿಚಾರಣೆಯನ್ನು ಆ.24ಕ್ಕೆ ಮುಂದೂಡಿ ಜು.18ರಂದು ಆದೇಶ ನೀಡಿದೆ.
ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಯೂ, ತನಗೆ ಹಾಗೂ ತನ್ನ ವಕೀಲರಿಗೆ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಉಡುಪಿ ಕೋರ್ಟ್ನಲ್ಲಿ ನಡೆಯುತ್ತಿರುವ ಈ ಪ್ರಕರಣದ ವಿಚಾರಣೆಯನ್ನು ಬೆಂಗಳೂರು ಕೋರ್ಟ್ಗೆ ವರ್ಗಾಯಿಸುವಂತೆ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಧೀಶರು, ಮುಂದಿನ ವಿಚಾರಣೆವರೆಗೆ ಉಡುಪಿ ನ್ಯಾಯಾಲಯದ ಕಲಾಪಕ್ಕೆ ತಡೆ ನೀಡಿ ಆದೇಶ ಹೊರಡಿಸಿದರು.
ಇದರಿಂದಾಗಿ ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಜುಲೈ 18ರಂದು ನಡೆಯಬೇಕಿದ್ದ ವಿಚಾರಣೆಯನ್ನು ಆಗಸ್ಟ್ 24ಕ್ಕೆ ಮುಂದೂಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ವೇಳೆ ಬೆಂಗಳೂರಿನ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪ್ರವೀಣ್ ಚೌಗುಲೆ ಅವರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.