ಮಂಗಳೂರು, ಜು.30(DaijiworldNews/AK):ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಕಾರಣ ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆಗಳಿಗೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ನದಿ ಮತ್ತು ಸಮುದ್ರ ತೀರದ ಜನರಿಗೆ ಎಚ್ಚರ ವಹಿಸಲು ಸಲಹೆ ನೀಡಲಾಗಿದೆ. ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣಾ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಿದ್ದಾರೆ.
ಮಕ್ಕಳು ತಗ್ಗು ಪ್ರದೇಶಗಳು, ಸರೋವರಗಳು, ಸಮುದ್ರ ತೀರ ಮತ್ತು ನದಿ ಬದಿಗಳಿಗೆ ಹೋಗದಂತೆ ಪಾಲಕರು ಖಚಿತಪಡಿಸಿಕೊಳ್ಳಬೇಕು. ಮೀನುಗಾರರಿಗೂ ನೀರಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಕಚೇರಿಯಲ್ಲಿಯೇ ಇರುವಂತೆ ತಿಳಿಸಲಾಗಿದೆ. ಜಿಲ್ಲಾಡಳಿತದಿಂದ ವಿವಿಧ ಹುದ್ದೆಗಳಿಗೆ ನೇಮಕಗೊಂಡಿರುವ ನೋಡಲ್ ಅಧಿಕಾರಿಗಳು ಜಾಗೃತರಾಗಿ ಸಾರ್ವಜನಿಕರ ದೂರುಗಳಿಗೆ ಸ್ಪಂದಿಸುವಂತೆ ಕೋರಲಾಗಿದೆ. ತಹಶೀಲ್ದಾರ್ಗಳು ನಿರಂತರ ಸಂಪರ್ಕದಲ್ಲಿರಲು ಸೂಚಿಸಲಾಗಿದೆ.
ಪ್ರಾಕೃತಿಕ ವಿಕೋಪ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿಯನ್ನು ಸಂಪರ್ಕಿಸಬಹುದಾಗಿದೆ. ತುರ್ತು ಸೇವೆಗೆ ೨೪/೭ ಕಂಟ್ರೋಲ್ ರೂಂ 1077/2442590. ಮಂಗಳೂರು ತಾಲೂಕು -0824-2220597,ಉಳ್ಳಾಲ ತಾಲೂಕು- 0824-2204424, ಬಂಟ್ವಾಳ ತಾಲೂಕು- 08255-232500,ಪುತ್ತೂರು ತಾಲೂಕು- 02851-230349, ಬೆಳ್ತಂಗಡಿ ತಾಲೂಕು-08256-232047, ಸುಳ್ಯ ತಾಲೂಕು- 08257-231231,ಮೂಡಬಿದ್ರೆ ತಾಲೂಕು- 08258-238100,ಮುಲ್ಕಿ ತಾಲೂಕು-0824-2294496.