ಮಂಗಳೂರು, ಮೇ23(Daijiworld News/SS): ದಕ್ಷಿಣ ಕನ್ನಡ ಜಿಲ್ಲೆಯ ಜನತೆ ಕೊಟ್ಟ ತೀರ್ಪಿಗೆ ಕೃತಜ್ಞತಾ ಪೂರ್ವಕವಾಗಿ ತಲೆಬಾಗುತ್ತೇವೆ ಎಂದು ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
ಕಾಂಗ್ರೆಸ್ ಜೆಡಿಎಸ್ ಮೈತ್ರಿ ಪಕ್ಷಕ್ಕೆ ರಾಜ್ಯ ಹಾಗೂ ದಕ್ಷಿಣ ಕನ್ನಡ ಲೋಕಸಭೆಯಲ್ಲಿ ಅನಿರೀಕ್ಷಿತ ಸೋಲು ಎದುರಾಗಿದೆ. ನಮ್ಮ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಒಟ್ಟಾಗಿ ಸೇರಿ ಹಗಲಿರುಳು ಕೆಲಸ ಮಾಡಿದರು ಕೂಡಾ ಗೆಲುವು ಸಾಧ್ಯವಾಗಿಲ್ಲ ಎಂದು ಹೇಳಿದರು.
ಜಿಲ್ಲೆಯ ಅಭಿವೃದ್ಧಿಗಾಗಿ ಕೇಂದ್ರ ಸರಕಾರದೊಂದಿಗೆ ರಾಜ್ಯ ಸರಕಾರವೂ ಸಂಪೂರ್ಣ ಸಹಕಾರ ನೀಡಲಿದೆ. ಸೋಲು ಶಾಶ್ವತವಲ್ಲ. ಕಾಂಗ್ರೆಸ್ ಪಕ್ಷ ಆತ್ಮಾವಲೋಕನ ಮಾಡಿ ಸಂಘಟನೆ ಮುಖಾಂತರ ದೇಶದ ಸಂವಿಧಾನ, ಪ್ರಜಾಪ್ರಭುತ್ವ, ಜಾತ್ಯಾತೀತ ತತ್ವವನ್ನು ರಕ್ಷಣೆ ಮಾಡಿ ಉಳಿಸಲಿಕ್ಕೆ ಪಣ ತೊಡಲಿದೆ ಎಂದು ತಿಳಿಸಿದರು.
ದಕ್ಷಿಣ ಕನ್ನಡ ಗರಿಷ್ಟ ಮತದಾನವಾಗಿರುವಂತಹ ಜಿಲ್ಲೆ. ಇಲ್ಲಿ ಶಾಂತಿಯುತವಾಗಿ ಚುನಾವಣೆಯಾಗಿದೆ. ಇದಕ್ಕಾಗಿ ಎಲ್ಲಾ ಪಕ್ಷದ ನಾಯಕರು ಮತ್ತು ಕಾರ್ಯಕರ್ತರನ್ನು, ಜಿಲ್ಲಾಡಳಿತದ ಎಲ್ಲಾ ಅಧಿಕಾರಿ ವರ್ಗದವರಿಗೆ ನಾನು ಅಭಿನಂದಿಸಿ, ಕೃತಜ್ಞತೆ ಸಲ್ಲಿಸುತ್ತಿದ್ದೇನೆ ಎಂದು ಹೇಳಿದರು.
ಇದೇ ವೇಳೆ ಯು.ಟಿ. ಖಾದರ್, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸತ್ ಸದಸ್ಯರಾಗಿ ಪುನರಾಯ್ಕೆಯಾದ ನಳಿನ್ ಕುಮಾರ್ ಕಟೀಲ್ ಅವರಿಗೆ ಅಭಿನಂದನೆ ಸಲ್ಲಿಸಿದರು.