ಬೆಂಗಳೂರು, ಆ.23(DaijiworldNews/TA) : ಮುಡಾ ಹಗರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಮತ್ತು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ನಡುವಣ ವಾಕ್ಸಮರ ತಾರಕಕ್ಕೇರಿದಂತಿದೆ. ಮೂಡಾ ನಿವೇಶನ ಹಂಚಿಕೆಯಲ್ಲಿ ನನ್ನ ಹಾಗೂ ನನ್ನ ಕುಟುಂಬದ ಪಾತ್ರವೇ ಇಲ್ಲ ಎಂದು ಹೇಳುತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ, ದಾಖಲೆ ಸಮೇತ ತಿರುಗೇಟು ನೀಡಿದ್ದಾರೆ.
‘ಸನ್ಮಾನ್ಯ ಸಿಎಂ ಸಿದ್ದರಾಮಯ್ಯನವರೇ, ಮುಡಾ ನಿವೇಶನ ಹಂಚಿಕೆಯಲ್ಲಿ ನನ್ನ ಹಾಗೂ ನನ್ನ ಕುಟುಂಬದ ಪಾತ್ರವೇ ಇಲ್ಲ ಎಂದು ಬೊಗಳೆ ಬಿಡುವ ನಿಮಗೆ ಕನ್ನಡ ಬರುತ್ತದೆ, ಭಾಷೆಯೂ ಗೊತ್ತಿದೆ ಎಂದು ನಾನಾದರೂ ಪರಿಭಾವಿಸುತ್ತೇನೆ. ನೀವು ಸ್ವಯಂಘೋಷಿತ ವಕೀಲರಲ್ಲವೇ? ಇಲ್ಲಿರುವ ದಾಖಲೆಯನ್ನೊಮ್ಮೆ ಕಣ್ಣಲ್ಲಿ ಕಣ್ಣಿಟ್ಟು ಓದಿ. 50:50ರ ಅನುಪಾತದಲ್ಲಿಯೇ ಮುಡಾ ಬದಲಿ ನಿವೇಶನ ನೀಡಲೇಬೇಕು ಎಂದು ಸಿಎಂ ಸಾಹೇಬರ ಧರ್ಮಪತ್ನಿ ‘ಒತ್ತಾಯ’ ಮಾಡಿದ್ದಾರೆ’ ಎಂಬುವುದಾಗಿ ದಾಖಲೆಯನ್ನು ಲಗತ್ತಿಸಿ ಕುಮಾರಸ್ವಾಮಿ ಸಿಎಂ ವಿರುದ್ಧ ಆಕ್ರೋಶದ ಪೋಸ್ಟ್ ಹಂಚಿಕೊಂಡಿದ್ದಾರೆ.