ಬೆಂಗಳೂರು, ಆ.23(DaijiworldNews/AK): ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಕೇಸ್ಗೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸಿ ಇಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ತನಿಖಾಧಿಕಾರಿ ಸುಮಾರಾಣಿ ಅವರಿಂದ ಚಾರ್ಜ್ಶೀಟ್ ಸಲ್ಲಿಸಲಾಗಿದೆ.
ಆ ಮೂಲಕ ಪ್ರಜ್ವಲ್ ರೇವಣ್ಣ ವಿರುದ್ಧ ಮೊದಲ ಚಾರ್ಜ್ಶೀಟ್ ಇದಾಗಿದೆ.ಹಾಸನದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಕೇಸ್ ನಂತರ ಸಿಐಡಿಗೆ ವರ್ಗಾವಣೆ ಆಗಿತ್ತು. ತನಿಖೆ ಕೈಗೆತ್ತಿಕೊಂಡು ಎಸ್ಐಟಿ ಅಧಿಕಾರಿಗಳು 123 ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಸುಮಾರು 2 ಸಾವಿರ ಪುಟಗಳ ಚಾರ್ಜ್ಶೀಟ್ನ್ನು ಅಧಿಕಾರಿಗಳು ಸಲ್ಲಿಸಿದ್ದಾರೆ.
ಇತ್ತ ಹೆಚ್ಡಿ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡ ಚಾರ್ಜ್ಶೀಟ್ ಸಲ್ಲಿಸಲಾಗಿದೆ. ಹೊಳೆನರಸೀಪುರ ಟೌನ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದವು.ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಪ್ರಕರಣ, ಕೆ.ಆರ್.ನಗರದ ಕಿಡ್ನ್ಯಾಪ್ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಪ್ರಜ್ವಲ್ರನ್ನ ಎಸ್ಐಟಿ ಕಸ್ಟಡಿಗೆ ಪಡೆದಿತ್ತು. ಈ ಎರಡೂ ಕೇಸ್ಗಳಲ್ಲಿ ವಿಚಾರಣೆ ಮುಗಿದಿರೋ ಕಾರಣಕ್ಕೆ ಪ್ರಜ್ವಲ್ ರೇವಣ್ಣರನ್ನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು.
ಇತ್ತೀಚೆಗೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣನರಿಂದ ಸಲ್ಲಿಸಲಾಗಿದ್ದ ನಿರೀಕ್ಷಣಾ ಜಾಮೀನು ಕೋರಿ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ವಜಾ ಮಾಡಿದ್ದಾರೆ. ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ಸೆರೆವಾಸ ಮುಂದುವರೆಯಲಿದೆ.